ನವದೆಹಲಿ: ಚುನಾವಣಾ ಪ್ರಚಾರದ ವೇಳೆ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದು, ಈ ಹಿನ್ನಲೆಯಲ್ಲಿ ಚುನಾವಣಾ ಆಯೋಗ ಕೇಜ್ರಿವಾಲ್ ಅವರಿಗೆ ಸೋಮವಾರ ನೋಟಿಸ್ ಜಾರಿ ಮಾಡಿದೆ.
ಈ ಹಿಂದೆ ಗೋವಾದಲ್ಲಿ ನಡೆದ ಚುನಾವಣಾ ಪ್ರಚಾರದ ವೇಳೆ ಕೇಜ್ರಿವಾಲ್ ಅವರು ಪರಿಣಾಮಕಾರಿ ಹೇಳಿಕೆಯೊಂದನ್ನು ನೀಡಿದ್ದರು. ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಯಾರೇ ದುಡ್ಡು ಕೊಟ್ಟರೂ ತೆಗೆದುಕೊಳ್ಳಿ. ಆದರೆ, ಆಮ್ ಆದ್ಮಿ ಪಕ್ಷಕ್ಕೆ ಮಾತ್ರವೇ ಮತ ಹಾಕಿ ಎಂದು ಜನರಿಗೆ ಹೇಳಿದ್ದರು.
ಈ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿರುವ ಚುನಾವಣಾ ಆಯೋಗವು, ಇದೀಗ ಕೇಜ್ರಿವಾಲ್ ಅವರಿಗೆ ನೋಟಿಸ್ ಜಾರಿ ಮಾಡಿದ್ದು, ಜನವರಿ 19ರೊಳಗಾಗಿ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿ ಎಂದು ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಚುನಾವಣಾಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕಿಲ್ಲ
ಚುನಾವಣಾ ಅಧಿಕಾರಿಗಳಿಗೆ ಆಯೋಗ ಅತ್ಯಂತ ಶಿಸ್ತುಬದ್ಧ ಸಂಸ್ಥೆಯಾಗಿದ್ದು, ಚುನಾವಣೆ ವೇಳೆ ಯಾವುದೇ ರೀತಿಯ ಅವ್ಯವಸ್ಥೆಗಳು ಕಂಡು ಬಂದಲ್ಲಿ ಚುನಾವಣಾ ಆಯೋಗದ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಅಧಿಕಾರ ರಾಜ್ಯ ಸರ್ಕಾರಕ್ಕೆ ಇಲ್ಲ ಎಂದು ಚುನಾವಣಾ ಆಯೋಗ ಇದೇ ವೇಳೆ ಸ್ಪಷ್ಟನೆ ನೀಡಿದೆ.
ಅಧಿಕಾರಿಗಳ ಅಥವಾ ಸಿಬ್ಬಂದಿಗಳ ವಿರುದ್ಧ ಯಾವುದೇ ಆರೋಪಗಳು ಅಥವಾ ಅವರ ಕೆಲಸದಲ್ಲಿ ಯಾವುದೇ ತೊಂದರೆ, ಸಮಸ್ಯೆಗಳು ಎದುರಾದರೆ, ಅದನ್ನು ಚುನಾವಣಾ ಆಯೋಗದ ಗಮನಕ್ಕೆ ತರಬೇಕೆ ವಿನಃ ರಾಜ್ಯ ಸರ್ಕಾರ ಅಧಿಕಾರಿಗಳ ವಿರುದ್ದ ಕ್ರಮ ಕೈಗೊಳ್ಳುವ ಅಧಿಕಾರವನ್ನು ಹೊಂದಿಲ್ಲ ಎಂದು ಚುನಾವಣಾ ಆಯೋಗ ಹೇಳಿಕೊಂಡಿದೆ.