ಕಣ್ಣೂರು: ಬಿಜೆಪಿ ಕಚೇರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಕೇರಳದ ಕಣ್ಣೂರಿನಲ್ಲಿ ನಡೆದಿದೆ. ಇದಕ್ಕೂ ಕೆಲವೇ ಗಂಟೆಗಳ ಮುನ್ನ ಸಿಪಿಐ(ಎಂ) ಕಾರ್ಯಕರ್ತರ ಮೇಲೆ ನಾಡ ಬಾಂಬ್ ದಾಳಿ ನಡೆದಿದ್ದು, 7 ಕಾರ್ಯಕರ್ತರು ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.
ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಿರುವ ಘಟನೆಯ ಹಿಂದೆ ಸಿಪಿಐ-ಎಂ ಕಾರ್ಯಕರ್ತರ ಕೈವಾಡವಿದೆ ಎಂದು ಬಿಜೆಪಿ ಆರೋಪಿಸಿದೆ. ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿರುವ ಪೊಲೀಸ್ ಅಧಿಕಾರಿಗಳು, ಈ ಘಟನೆ ನಡೆದ ಬಳಿಕ ಸಿಪಿಐ(ಎಂ) ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ಮನೆಗಳ ಮೇಲೂ ದಾಳಿ ನಡೆದಿರುವ ಕೆಲವು ಘಟನೆಗಳು ಬೆಳಕಿಗೆ ಬಂದಿದೆ ಎಂದು ಹೇಳಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಕೆಲವರನ್ನು ವಶಕ್ಕೆ ಪಡೆಯಲಾಗಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಿದ್ದಾರೆ.