ಚೆನ್ನೈ: ಚೆನ್ನೈನ ಬೇಕರಿಯೊಂದರ್ರಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ ಓರ್ವ ಅಗ್ನಿಶಾಮಕ ದಳದ ಸಿಬ್ಬಂದಿ ದುರ್ಮರಣವನ್ನಪ್ಪಿ 47ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಭಾನುವಾರ ನಡೆದಿದೆ.
ಕೊಡುಂಗೈಯೂರ್ ಮೀನಾಂಬಲ್ ಸ್ಟ್ರೀಟ್ ನಲ್ಲಿರುವ ಬೇಕರಿಯೊಂದರಲ್ಲಿ ಇಂದು ಬೆಳಿಗಿನ ಜಾವ 1 ಗಂಟೆ ಸುಮಾರಿಗೆ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ದೌಡಾಯಿಸಿದ್ದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ಆರಂಭಿಸಿದ್ದರು.
ಈ ವೇಳೆ ಬೇಕರಿಯಲ್ಲಿದ್ದ ಸಿಲಿಂಡರ್ ವೊಂದು ಏಕಾಏಕಿ ಸ್ಫೋಟಗೊಂಡಿದೆ. ಪರಿಣಾಮ ಸ್ಥಳದಲ್ಲಿದ್ದ ಓರ್ವ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಅಗ್ನಿ ಅವಘಡದಲ್ಲಿ ಬೇಕರಿಯ ಹತ್ತಿರದಲ್ಲಿಯೇ ವಾಸವಿದ್ದ 47 ಮಂದಿಗೆ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡಿರುವ 47 ಮಂದಿಯ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಮೃತ ಅಗ್ನಿಶಾಮಕ ದಳದ ಸಿಬ್ಬಂದಿಗೆ ಪರಿಹಾರ ಘೋಷಿಸಿದ ಸಿಎಂ
ಬೆಂಕಿ ನಂದಿಸುವ ವೇಳೆ ಮೃತಪಟ್ಟ ಅಗ್ನಿಶಾಮಕದ ದಳದ ಸಿಬ್ಬಂದಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಧನ ಹಾಗೂ ಕುಟುಂಬ ಸದಸ್ಯರಿಗೊಬ್ಬರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಇ.ಪಳನಿಸ್ವಾಮಿಯವರು ಘೋಷಣೆ ಮಾಡಿದ್ದಾರೆ. ಅಲ್ಲದೆ, ಗಾಯಾಳುಗಳಿಗೂ ಪರಿಹಾರ ನೀಡುವುದಾಗಿ ಹೇಳಿದ್ದಾರೆ.