ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಝಾಕಿರ್ ನಾಯಕ್ ಪಾಸ್ ಪೋರ್ಟ್ ರದ್ದು
ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಮುಂದೆ ವಿಚಾರಣೆಗೆ....
ನವದೆಹಲಿ: ಭಯೋತ್ಪಾದನೆಗೆ ಹಣಕಾಸು ನೆರವು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ ಐಎ) ಮುಂದೆ ವಿಚಾರಣೆಗೆ ಹಾಜರಾಗಲು ವಿಫಲವಾದ ವಿವಾದಿತ ಇಸ್ಲಾಂ ಧರ್ಮ ಪ್ರಚಾರಕ ಡಾ. ಝಾಕಿರ್ ನಾಯಕ್ ಪಾಸ್ ಪೋರ್ಟ್ ಅನ್ನು ಮಂಗಳವಾರ ರದ್ದುಗೊಳಿಸಲಾಗಿದೆ.
ವಿದೇಶಾಂಗ ಸಚಿವಾಲಯದ ಸೂಚನೆ ಹಿನ್ನೆಲೆಯಲ್ಲಿ ಮುಂಬೈನ ಪ್ರಾದೇಶಿಕ ಪಾಸ್ ಪೋರ್ಟ್ ಕಚೇರಿ ಇಂದು ಝಾಕಿರ್ ನಾಯಕ್ ಪಾಸ್ ಪೋರ್ಟ್ ಅನ್ನು ರದ್ದುಗೊಳಿಸಿದೆ.
ಝಾಕಿರ್ ನಾಯಕ್ ವಿರುದ್ಧದ ಭಯೋತ್ಪಾದನೆಗೆ ಹಣಕಾಸು ನೆರವು ಹಾಗೂ ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆ ನಡೆಸುತ್ತಿರುವ ಎನ್ ಐಎ ಆರೋಪಿಯ ಪಾಸ್ ಪೋರ್ಟ್ ರದ್ದುಗೊಳಿಸುವಂತೆ ವಿದೇಶಾಂಗ ಸಚಿವಾಲಯಕ್ಕೆ ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ವಿದೇಶಾಂಗ ಸಚಿವಾಲಯ ಕಳೆದ ವಾರ ಝಾಕಿರ್ ನಾಯಕ್ ಪಾಸ್ಟ್ ರದ್ದುಗೊಳಿಸುವಂತೆ ಮುಂಬೈ ಪ್ರಾದೇಶಿಕ ಕಚೇರಿಗೆ ಸೂಚಿಸಿತ್ತು.
ಕೋಮುವಾದ ಮತ್ತು ಭಯೋತ್ಪಾದನೆ ಪ್ರಚೋದಕ ಭಾಷಣ ಹಾಗೂ ಹಣಕಾಸು ನೆರವು ನೀಡಿದ ಆರೋಪದ ಮೇಲೆ ನವೆಂಬರ್ 18, 2016ರಂದು ಝಾಕಿರ್ ನಾಯಕ್ ವಿರುದ್ಧ ಎನ್ ಐಎ ಕ್ರಿಮಿನಲ್ ಕೇಸ್ ದಾಖಲಿಸಿತ್ತು.
ಇನ್ನು ನಾಯಕ್ ಒಡೆತನದ ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ (ಐಆರ್ಎಫ್) ಸಂಸ್ಥೆಯನ್ನು ಕಾನೂನುಬಾಹಿರ ಚಟುವಟಿಕೆ ಕಾಯ್ದೆ ಅಡಿ ಕೇಂದ್ರ ಸರ್ಕಾರ ನಿಷೇಧ ಹೇರಿದೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.