ಕೊಚ್ಚಿ: ಮಲೆಯಾಳಂ ನಟಿಯ ಅಪಹರಣ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಅಲಿಯಾಸ್ ಸುನಿಲ್ ಕುಮಾರ್ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 3ರವರೆಗೆ ವಿಸ್ತರಿಸಲಾಗಿದೆ.
ಪಲ್ಸರ್ ಸುನಿಯ ನ್ಯಾಯಾಂಗ ಬಂಧನ ಅವಧಿ ಇಂದಿಗೆ ಅಂತ್ಯಗೊಂಡ ಹಿನ್ನೆಲೆಯಲ್ಲಿ ಇಂದು ಆರೋಪಿಯನ್ನು ಅಂಗಮಲ್ಯ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಕೋರ್ಟ್ ಗೆ ಹಾಜರುಪಡಿಸಲಾಯಿತು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿದೆ. ಅಲ್ಲದೆ ಜಾಮೀನು ಕೋರಿ ಪಲ್ಸರ್ ಸುನಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಗುರುವಾರಕ್ಕೆ ಮುಂದೂಡಿದೆ.
ಈ ಮಧ್ಯೆ, ಎರ್ನಾಕುಲಂ ಸೆಂಟ್ರಲ್ ಪೊಲೀಸರು ಪಲ್ಸರ್ ಸುನಿ ಆಪ್ತ ಎಬಿನ್ ಎಂಬ ಯುವಕನನ್ನು ಬಂಧಿಸಿದ್ದಾರೆ. ಎಬಿನ್ ಮಲೆಯಾಳಂ ನಟಿ ಅಪಹರಣದ ವೇಳೆ ಪಲ್ಸರ್ ಸುನಿ ಜೊತೆ ಇದ್ದ ಎನ್ನಲಾಗಿದೆ. ಅಲ್ಲದೆ 2011ರಲ್ಲಿ ನಡೆದ ಮತ್ತೊಬ್ಬ ನಟಿಯ ಅಪಹರಣದಲ್ಲೂ ಎಬಿನ್ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದಾನೆ.
ಎರ್ನಾಕುಲಂಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಟಿಯನ್ನು ಅಪಹರಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಪಲ್ಸರ್ ಸುನಿಯನ್ನು ಫೆ.23ರಂದು ಪೊಲೀಸರು ಬಂಧಿಸಿದ್ದಾರೆ.
ಪ್ರಕರಣ ಸಂಬಂಧ ಸುನಿಲ್ ಸೇರಿದಂತೆ ಇನ್ನಿತರೆ ಆರೋಪಿಗಳ ವಿರುದ್ಧ ಕೇರಳ ಪೊಲೀಸರು ಐಪಿಸಿ ಸೆಕ್ಸನ್ 342 (ಅಕ್ರಮ ಬಂಧನ), 366 (ಅಪಹರಣ ಅಥವಾ ಮಹಿಳೆಯ ಅಪಹರಣ), 376 (ಅತ್ಯಾಚಾರ, 506 (1) ಮತ್ತು 120 (ಬಿ) (ವಂಚನೆ)) ಅಡಿ ಕೇಸ್ ದಾಖಲಿಸಿಕೊಂಡಿದ್ದಾರೆ.