ಕಾಶ್ಮೀರ: ಯೋಧರಿಂದ ಪ್ರತಿಭಟನಾಕಾರರ ಮೇಲೆ ಗುಂಡಿನ ದಾಳಿ, ಓರ್ವ ಯುವಕ ಸಾವು
ಜಮ್ಮು ಮತ್ತು ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ಕಲ್ಲು ತೂರಾಟಗಾರರ ಮೇಲೆ ಗುಂಡಿನ ದಾಳಿ ನಡೆಸಿವೆ....
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬದ್ಗಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ಕಲ್ಲು ತೂರಾಟಗಾರರ ಮೇಲೆ ಗುಂಡಿನ ದಾಳಿ ನಡೆಸಿವೆ ಎಂದು ಆರೋಪಿಸಲಾಗಿದ್ದು, ಘಟನೆಯಲ್ಲಿ 18 ವರ್ಷದ ಓರ್ವ ಯುವಕ ಮೃತಪಟ್ಟಿದ್ದಾರೆ ಮತ್ತು ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮಧ್ಯಾಹ್ನ ಬೀರ್ವಾಹ್ ಪಟ್ಟಣದಲ್ಲಿ ಪ್ರತಿಭಟನಾಕಾರರು ಸೇನೆಯ 53ನೇ ರಾಷ್ಟ್ರೀಯ ರೈಫಲ್ಸ್ ಗೆ ಸೇರಿದ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಸೈನಿಕರು ಕಲ್ಲು ತೂರಾಟಗಾರರ ಮೇಲೆ ಗುಂಡು ಹಾರಿಸಿದ ಪರಿಣಾಮ ಇಬ್ಬರು ಯುವಕರು ಗಾಯಗೊಂಡಿದ್ದಾರೆ ಎಂದು ಆರೋಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಗಾಯಗೊಂಡಿದ್ದ ಯುವಕ ತನ್ವೀರ್ ಅಹ್ಮದ್ ವನಿ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮತ್ತೊರ್ವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
ಭದ್ರತಾ ಪಡೆಗಳ ಗುಂಡಿನ ದಾಳಿಯಿಂದಾಗಿ ಯುವಕ ಮೃತಪಟ್ಟಿರುವ ಹಿನ್ನೆಲೆಯಲ್ಲಿ ಬೀರ್ವಾಹ್ ಪಟ್ಟಣದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.