ನವದೆಹಲಿ: ಆಡಳಿತರೂಢ ಬಿಹಾರ ಮಹಾ ಮೈತ್ರಿಕೂಟದಲ್ಲಿ ಬಿರುಕು ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಶನಿವಾರ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಪ್ರಸ್ತೂತ ರಾಜಕೀಯ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಪಕ್ಷದ ಮೂಲಗಳ ಪ್ರಕಾರ, ಇಂದು ಸಂಜೆ ತುಗಲಖ್ ಲೇನ್ ನಲ್ಲಿರುವ ರಾಹುಲ್ ಗಾಂಧಿ ನಿವಾಸಕ್ಕೆ ತೆರಳಿದ ನಿತೀಶ್ ಕುಮಾರ್ ಅವರು, ಬಿಹಾರ ಉಪ ಮುಖ್ಯಮಂತ್ರಿ ಹಾಗೂ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ಪುತ್ರ ತೇಜಸ್ವಿ ಯಾದವ್ ಅವರ ವಿರುದ್ಧದ ಭ್ರಷ್ಟಾಚಾರ ಆರೋಪದ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ನಿರ್ಗಮಿಸುತ್ತಿರುವ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರಿಗಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ರಾತ್ರಿ ಏರ್ಪಡಿಸಿರುವ ಔತಣಕೂಟದಲ್ಲಿ ಭಾಗಿಯಾಗಲು ನಿತೀಶ್ ಕುಮಾರ್ ಅವರು ದೆಹಲಿಗೆ ತೆರಳಿದ್ದಾರೆ. ಇದೇ ವೇಳೆ ಸಮಯ ಮಾಡಿಕೊಂಡು ಬಿಹಾರ ಸಿಎಂ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಜೆಡಿಯು, ಆರ್ ಜೆಡಿ, ಕಾಂಗ್ರೆಸ್ ಮೈತ್ರಿಕೂಟದಲ್ಲಿನ ಭಿನ್ನಾಭಿಪ್ರಾಯಗಳ ಬಗ್ಗೆ ಚರ್ಚಿಸಿದ್ದಾರೆ.
ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ತೇಜಸ್ವಿ ಯಾದವ್ ಅವರು ರಾಜಿನಾಮೆ ನೀಡಬೇಕು ಎಂದು ಜೆಡಿಯು ಪಟ್ಟು ಹಿಡಿದಿದೆ. ಆದರೆ ಲಾಲು ಪ್ರಸಾದ್ ಯಾದವ್ ಅವರು ತಮ್ಮ ಪುತ್ರ ರಾಜಿನಾಮೆ ನೀಡುವುದಿಲ್ಲ ಎನ್ನುತ್ತಿದ್ದಾರೆ.