ಮಿರ್ಜಾಪುರ: ವಿಷಯುಕ್ತ 'ಚಹಾ' ಕುಡಿದು 21 ಜನರು ಅಸ್ವಸ್ಥಗೊಂಡಿರುವ ಘಟನೆ ಉತ್ತರಪ್ರದೇಶದ ಮಿರ್ಜಾಪುರ್ ಜಿಲ್ಲೆಯಲ್ಲಿ ಭಾನುವಾರ ನಡೆದಿದೆ.
ಇಂದು ಬೆಳಗಿನ ಜಾವ ಮಿರ್ಜಾಪುರದಲ್ಲಿರುವ ರಸ್ತೆ ಬದಿಯ ಅಂಗಡಿಯೊಂದರಲ್ಲಿ ನೀಡಲಾಗಿದ್ದ ಚಹಾವನ್ನು ಜನರು ಕುಡಿದಿದ್ದಾರೆ. ಚಹಾ ಕುಡಿದ ಕೆಲವೇ ನಿಮಿಷಗಳಲ್ಲಿ ಅತೀವ ಹೊಟ್ಟೆನೋವು ಕಾಣಿಸಿಕೊಂಡು ಅಸ್ವಸ್ಥಗೊಂಡಿದ್ದಾರೆ. ಕೂಡಲೇ ಸ್ಥಳೀಯರು ಜನರನ್ನು ಆರೋರಾ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿದ್ದಾರೆ.
ಪ್ರಸ್ತುತ ಆಸ್ಪತ್ರೆಗೆ ದಾಖಲಾಗಿರುವ 21 ಜನರ ಪೈಕಿ ಮೂವರ ಸ್ಥಿತಿ ಚಿಂತಾಜನಕವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ವಾರಣಾಸಿ ಟ್ರಾಮಾ ಸೆಂಟರ್ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಾಮಶೀಷ್ ಚಹಾ ಅಂಗಡಿಯ ಮಾಲೀಕನಾಗಿದ್ದು, ಘಟನೆ ಬಳಿಕ ತಲೆಮರೆಸಿಕೊಂಡಿದ್ದಾನೆಂದು ಹೇಳಲಾಗುತ್ತಿದೆ. ಪ್ರಸ್ತುತ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಅಂಗಡಿ ಮಾಲೀಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.