ದೇಶ

ಜುಲೈ 17ಕ್ಕೆ ರಾಷ್ಟ್ರಪತಿ ಚುನಾವಣೆ, ಜುಲೈ 20ಕ್ಕೆ ಮತ ಎಣಿಕೆ

Lingaraj Badiger
ನವದೆಹಲಿ: ಕೇಂದ್ರ ಚುನಾವಣಾ ಆಯೋಗ ಬಹುನಿರೀಕ್ಷಿತ ರಾಷ್ಟ್ರಪತಿ ಚುನಾವಣೆಯ ದಿನಾಂಕವನ್ನು ಬುಧವಾರ ಪ್ರಕಟಿಸಿದ್ದು, ಜುಲೈ 17ಕ್ಕೆ ಮುಂದಿನ ರಾಷ್ಟ್ರಪತಿ ಸ್ಥಾನಕ್ಕೆ ಚುನಾವಣೆ ನಡೆಯಲಿದೆ.
ಇಂದು ದೆಹಲಿಯಲ್ಲಿ ಸುದ್ದಿಗೋಷ್ಠಿಯಲ್ಲಿ ರಾಷ್ಟ್ರಪತಿ ಚುನಾವಣೆಯ ದಿನಾಂಕ ಪ್ರಟಿಸಿದ ಮುಖ್ಯ ಚುನಾವಣಾ ಆಯುಕ್ತ ನಸೀಂ ಜೈದಿ ಅವರು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರ ಅವಧಿ ಜುಲೈ 24ಕ್ಕೆ ಅಂತ್ಯವಾಗಲಿದೆ. ಈ ಹಿನ್ನಲೆಯಲ್ಲಿ ಜುಲೈ 17ರಂದು ಚುನಾವಣೆ ನಡೆಯಲಿದೆ. ಜುಲೈ 20ರಂದು ಮತ ಎಣಿಕೆ  ಕಾರ್ಯ ನಡೆಯಲಿದೆ ಎಂದು ತಿಳಿಸಿದರು.
ರಾಷ್ಟ್ರಪತಿ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 28 ಕೊನೆಯ ದಿನವಾಗಿದ್ದು, ಜುಲೈ 1 ನಾಮಪತ್ರ ಹಿಂತೆಗೆದುಕೊಳ್ಳಲು ಕೊನೆಯ ದಿನವಾಗಿದೆ.
ಈ ಮಧ್ಯ ರಾಷ್ಟ್ರಪತಿ ಚುನಾವಣೆಗೆ ಆಡಳಿತ ಮತ್ತು ಪ್ರತಿಪಕ್ಷಗಳ ಅಭ್ಯರ್ಥಿಗಳು ಇನ್ನೂ ಅಂತಿಮವಾಗಿಲ್ಲ. ಬಿಜೆಪಿಯಿಂದ ದ್ರೌಪದಿ ಮುರ್ಮು, ಸುಷ್ಮಾ ಸ್ವರಾಜ್, ಸುಮಿತ್ರಾ ಮಹಾಜನ್ ಹೆಸರು ಕೇಳಿ ಬರುತ್ತಿವೆ. ಇನ್ನು ಪ್ರತಿಪಕ್ಷಗಳಿಂದ ಮಹಾತ್ಮಾ ಗಾಂಧೀಜಿ ಅವರ ಮೊಮ್ಮಗ ಗೋಪಾಲ ಕೃಷ್ಣ ಗಾಂಧಿ, ಮೀರಾ ಕುಮಾರ್ ಹೆಸರು ಕೇಳಿ ಬರುತ್ತಿದೆ.
ಒಬ್ಬರಿಗಿಂತ ಹೆಚ್ಚು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದರೆ ಮಾತ್ರ ಚುನಾವಣೆ ನಡೆಸಬೇಕಾಗುತ್ತದೆ. ಒಬ್ಬರೇ ನಾಮಪತ್ರ ಸಲ್ಲಿಸಿದರೆ ಅವರೇ ಅವಿರೋಧವಾಗಿ ರಾಷ್ಟ್ರಪತಿ ಸ್ಥಾನಕ್ಕೆ ಆಯ್ಕೆಯಾಗುತ್ತಾರೆ.
SCROLL FOR NEXT