ನವದೆಹಲಿ: ನ್ಯಾಯಾಂಗ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ 6 ತಿಂಗಳು ಜೈಲು ಶಿಕ್ಷೆಗೆ ಗುರಿಯಾಗಿರುವ ನ್ಯಾಯಮೂರ್ತಿ ಸಿ.ಎಸ್.ಕರ್ಣನ್ ಅವರ ಶಿಕ್ಷೆಯನ್ನು ರದ್ದುಗೊಳಿಸಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ.
ತಮಗೆ ವಿಧಿಸಿರುವ 6 ತಿಂಗಳ ಜೈಲು ಶಿಕ್ಷೆಯನ್ನು ಹಿಂಪಡೆಯಬೇಕು ಎಂದು ಕೋರಿ ನ್ಯಾ. ಕರ್ಣನ್ ಅವರು ಸಲ್ಲಿಸಿದ್ದ ಅರ್ಜಿಯನ್ನು ಮೇ 19ರಂದು ಸುಪ್ರೀಂ ಕೋರ್ಟ್ ವಜಾಗೊಳಿಸಿತ್ತು. ಅಲ್ಲದೆ ನ್ಯಾ. ಕರ್ಣನ್ ಸಲ್ಲಿಸಿರುವ ಅರ್ಜಿ ಸಮರ್ಥನೀಯವಾಗಿಲ್ಲ ಎಂದು ಹೇಳಿತ್ತು.
ಇದೇ ವೇಳೆ ನ್ಯಾಯಮೂರ್ತಿ ಕರ್ಣನ್ ಅವರು ನೀಡಿದ ಯಾವುದೇ ಆದೇಶಗಳನ್ನು ಪ್ರಕಟಿಸದಂತೆ ಮಾಧ್ಯಮಗಳಿಗೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.
ಕಳೆದ ಫೆಬ್ರವರಿ 8ರಂದು ಮದ್ರಾಸ್ ಹೈಕೋರ್ಟ್ ಹಾಗೂ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಬಹಿರಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದ ನ್ಯಾಯಮೂರ್ತಿ ಕರ್ಣನ್ ಅವರ ವಿರುದ್ಧ ಸುಪ್ರೀಂ ಕೋರ್ಟ್ ಸ್ವಯಂಪ್ರೇರಿತ ನ್ಯಾಯಾಂಗ ನಿಂದನೆ ಪ್ರಕರಣ ದಾಖಲಿಸಿಕೊಂಡಿತ್ತು. ಬಳಿಕ ಮೇ 9ರಂದು ನ್ಯಾ,ಕರ್ಣನ್ ಅವರಿಗೆ 6 ತಿಂಗಳು ಜೈಲು ಶಿಕ್ಷೆ ವಿಧಿಸಿದೆ.