ಪತ್ರಕರ್ತರೊಂದಿಗೆ ಮಾತನಾಡುತ್ತಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿ ಎಸ್.ಪಿ. ವೈದ್
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಕರ್ತವ್ಯನಿರತ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಮೂರನೇ ಆರೋಪಿಯ ಗುರುತು ಪತ್ತೆಯಾಗಿರುವುದಾಗಿ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಹೇಳಿದ್ದಾರೆ.
ಪ್ರಕರಣ ಸಂಬಂಧ ಹೇಳಿಕೆ ನೀಡಿರುವ ಜಮ್ಮು ಮತ್ತು ಕಾಶ್ಮೀರದ ಡಿಜಿ ಎಸ್.ಪಿ. ವೈದ್ ಅವರು, ಪ್ರಕರಣ ಸಂಬಂಧ ಈ ವರೆಗೂ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಲಾಗಿದ್ದು. ಮೂರನೇ ಆರೋಪಿಯ ಗುರುತು ಪತ್ತೆಯಾಗಿದೆ. ಉಳಿದ ಆರೋಪಿಗಳ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಅಧಿಕಾರಿ ಮಸೀದಿಯಿಂದ ಹೊರ ಬರುತ್ತಿದ್ದಂತೆಯೇ ಕಲ್ಲು ತೂರಾಟಗಾರರು ಘೋಷಣೆಗಳನ್ನು ಕೂಗಲು ಆರಂಭಿಸಿದ್ದಾರೆ. ಅಲ್ಲದೆ, ಪಂಡಿತ್ ಅವರ ಮೇಲೆ ಮುಗಿಬಿದ್ದು ಹಲ್ಲೆ ನಡೆಸಿದ್ದಾರೆ. ಪರಿಣಾಮ ಅಧಿಕಾರಿ ಸಾವನ್ನಪ್ಪಿದ್ದಾರೆ.
ಸಾಮಾನ್ಯ ಜನರಿಗೆ ಯಾವುದೇ ರೀತಿಯ ತೊಂದರೆಗಳು ಎದುರಾಗದಂತೆ ನೋಡಿಕೊಳ್ಳುವ ಸಲುವಾಗಿ ಮಸೀದಿ ಬಳಿ ಭದ್ರತಾ ಪಡೆಯನ್ನು ನಿಯೋಜಿಸಲಾಗಿತ್ತು. ಮಸೀದಿ ಹೊರಗೆ ನಿಂತಿದ್ದ ಕೆಲ ದುಷ್ಕರ್ಮಿಗಳು ಅಧಿಕಾರಿ ಮೇಲೆ ದಾಳಿ ನಡೆಸಿದ್ದಾರೆ. ಇದು ನಿಜಕ್ಕೂ ದುರಾದೃಷ್ಟಕರ ಘಟನೆ. ಮಾನವೀಯತೆ, ವಿಕೃತಿಗಳ ನಡುವೆಯು ವ್ಯತ್ಯಾಸವಿರಬೇಕು. ತಪ್ಪು ಯಾವುದೆಂಬುದನ್ನು ಜನರು ಅರ್ಥಮಾಡಿಕೊಳ್ಳಬೇಕಿದೆ. ಪ್ರಕರಣ ಸಂಬಂಧ ತನಿಖೆ ಪ್ರಗತಿಯಲ್ಲಿದೆಯೆಂದು ವೈದ್ ಅವರು ತಿಳಿಸಿದ್ದಾರೆ.