ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ
ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆ 2015ರಲ್ಲಿಯೂ ಚುನಾವಣೋತ್ತರ ಸಮೀಕ್ಷಾ ವರದಿಗಳನ್ನು ನೋಡಿದ್ದೇವೆ. ಆದರೆ, ಫಲಿತಾಂಶ ಪ್ರಕಟಗೊಂಡ ಬಳಿಕ ಸಮೀಕ್ಷಾ ಫಲಿತಾಂಶಗಳು ಸುಳ್ಳಾಗಿತ್ತು ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯವರು ಶುಕ್ರವಾರ ಹೇಳಿದ್ದಾರೆ.
ವಿಧಾನಸಭಾ ಚುನಾವಣೆ 2017ರ ಚುನಾವಣೋತ್ತರ ಸಮೀಕ್ಷಾ ವರದಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಉತ್ತರಪ್ರದೇಶದಲ್ಲಿ ಮೈತ್ರಿ ಪಕ್ಷಗಳು ಗೆಲವು ಸಾಧಿಸಲಿದೆ. ಇಂತಹ ರೀತಿಯ ಚುನಾವಣೋತ್ತರ ಸಮೀಕ್ಷಾ ವರದಿಗಳನ್ನು ಈ ಹಿಂದೆ ನಾವು ಬಿಹಾರ ಚುನಾವಣಾ ಸಂದರ್ಭದಲ್ಲೂ ನೋಡಿದ್ದೆವು. ಚುನಾವಣಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದೆ. ಫಲಿತಾಂಶ ಪ್ರಕಟಗೊಂಡ ಬಳಿಕವೇ ನಾವು ಮಾತನಾಡುತ್ತೇವೆಂದು ಹೇಳಿದ್ದಾರೆ.
ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳಿಗೆ ಅತ್ಯಂತ ಪ್ರತಿಷ್ಠೆಯ ಕಣವಾಗಿದ್ದ ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಚುನಾವಣೋತ್ತರ ಸಮೀಕ್ಷಾ ವರದಿಗಳು ನಿನ್ನೆಯಷ್ಟೇ ಬಹಿರಂಗಗೊಂಡಿತ್ತು, ದೇಶದ ಅತಿ ದೊಡ್ಡ ರಾಜ್ಯದಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದೆ ಅತಂತ್ರ ಸ್ಥಿತಿ ನಿರ್ಮಾಣವಾಗುವ ಸಾಧ್ಯತೆ ಇದೆ. ಆದರೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಅತಿ ಹೆಚ್ಚು ಸ್ಥಾನಗಳನ್ನು ಗಳಿಸುವ ಸಾಧ್ಯತೆ ಇದೆ ಎಂದು ಹಲವು ಚುನಾವಣೋತ್ತರ ಸಮೀಕ್ಷೆಗಳು ತಿಳಿಸಿತ್ತು.