ನವದೆಹಲಿ: ಗುಜರಾತ್‌ನಲ್ಲಿ 2002ರಲ್ಲಿ ನಡೆದ ಗಲಭೆ ಸಂದರ್ಭದಲ್ಲಿ ಬಿಲ್ಕಿಸ್ ಬಾನು ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಹೋಗಬೇಕೆಂದು ಸಂಸದ ಅಸಾವುದ್ದೀನ್ ಓವೈಸಿ ಅಭಿಪ್ರಾಯಪಟ್ಟಿದ್ದಾರೆ.
ಅತ್ಯಾಚಾರ ಪ್ರಕರಣದ 12 ಜನ ಅಪರಾಧಿಗಳಿಗೆ ವಿಧಿಸಲಾದ ಜೀವಾವಧಿ ಶಿಕ್ಷೆಯನ್ನು ಬಾಂಬೆ ಹೈಕೋರ್ಟ್ ಎತ್ತಿಹಿಡಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಸಾವುದ್ದೀನ್ ಓವೈಸಿ, ಕೋರ್ಟ್ ತೀರ್ಪನ್ನು ನಾನು ಗೌರವಿಸುತ್ತೇನೆ. ಆದರೆ ಗಲ್ಲು ಶಿಕ್ಷೆ ವಿಧಿಸುವುದಕ್ಕೆ ಸಂಬಂಧಿಸಿದಂತೆ ಕೋಮು ಪ್ರಕರಣಗಳಲ್ಲಿ ದ್ವಿಮುಖ ನೀತಿಯನ್ನು ಅನುಸರಿಸಲಾಗುತ್ತಿದೆ ಎನಿಸುತ್ತದೆ. ಬಿಲ್ಕಿಸ್ ಬಾನು ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಬೇಕಾಗಿತ್ತು ಎಂದು ಓವೈಸಿ ಹೇಳಿದ್ದಾರೆ.
ಕೇಂದ್ರ ಸರ್ಕಾರ ಬಿಲ್ಕಿಸ್ ಬಾನು ಪ್ರಕರಣದಲ್ಲಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿ ಗಲ್ಲು ಶಿಕ್ಷೆ ವಿಧಿಸುವಂತೆ ಮನವಿ ಮಾಡಾಬೇಕು. ಗುಜರಾತ್ ನಲ್ಲಿ ನರೇಂದ್ರ ಮೋದಿ ಮುಖ್ಯಮಂತ್ರಿಯಾಗಿದ್ದಾಗ ನಡೆದಿದ್ದ ಗಲಭೆಯ ವೇಳೆ ಬಿಲ್ಕಿನ್ ಬಾನು ಮೇಲೆ ಅತ್ಯಾಚಾರ ನಡೆಸಲಾಗಿತ್ತು ಎಂದು ಎಐಎಂಐಎಂ ಮುಖಂಡ ಹೇಳಿದ್ದಾರೆ.