ಮಧ್ಯಪ್ರದೇಶ: ಬಸ್ ಅಪಘಾತ- 3 ಸಾವು, 42 ಜನರಿಗೆ ಗಾಯ
ಮಧ್ಯಪ್ರದೇಶದಲ್ಲಿ ಡಿಂಡೋರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಉರುಳಿಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ, 42 ಜನರಿಗೆ ಗಾಯವಾಗಿರುವ...
ಡಿಂಡೋರಿ: ಮಧ್ಯಪ್ರದೇಶದಲ್ಲಿ ಡಿಂಡೋರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ವೊಂದು ಉರುಳಿಬಿದ್ದ ಪರಿಣಾಮ ಮೂವರು ಸಾವನ್ನಪ್ಪಿ, 42 ಜನರಿಗೆ ಗಾಯವಾಗಿರುವ ಘಟನೆ ಸೋಮವಾರ ನಡೆದಿದೆ.
ಮಧ್ಯಪ್ರದೇಶದ ಅಮರ್'ಕಂಟಕ್ ನಲ್ಲಿ ನರ್ಮದಾ ಸೇವಾ ಯಾತ್ರೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರೂ ಕೂಡ ಆಗಮಿಸುತ್ತಿದ್ದಾರೆ.
ಕಾರ್ಯಕ್ರಮ ಹಿನ್ನಲೆಯಲ್ಲಿ ಬಸ್ ವೊಂದು 60ಕ್ಕೂ ಹೆಚ್ಚು ಜನರನ್ನು ಹೊತ್ತು ಅಮರ್ ಕಂಟಕ್ ಬಳಿ ಬರುತ್ತಿತ್ತು. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ನೆಲಕ್ಕೆ ಉರುಳಿಬಿದ್ದಿದೆ. ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪಪಿ, 42 ಮಂದಿ ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಕಾರ್ಯಚರಣೆ ನಡೆಸಿ ಜನರನ್ನು ರಕ್ಷಣೆ ಮಾಡಿದ್ದಾರೆ. ಪ್ರಸ್ತುತ ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
42 ಮಂದಿ ಗಾಯಾಳುಗಳ ಪೈಕಿ 12 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಗಂಭೀರವಾಗಿ ಗಾಯಗೊಂಡವರನ್ನು ಜಿಲ್ಲಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.