ಜಮ್ಮು: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪದೇ ಪದೇ ಕದನ ವಿರಾಮ ಉಲ್ಲಂಘನೆ ಮಾಡುತ್ತಿರುವ ಹಿನ್ನಲೆಯಲ್ಲಿ ಗಡಿಯಲ್ಲಿರುವ 1,500 ಜನರನ್ನು ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಗಡಿಯಲ್ಲಿರುವ ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ಸೇನೆ ಅಪ್ರಚೋದಿತ ಗುಂಡು ಹಾಗೂ ಶೆಲ್ ದಾಳಿ ನಡೆಸುತ್ತಿದ್ದು, ಈ ಹಿನ್ನಲೆಯಲ್ಲಿ ನಾಗರಿಕರನ್ನು ಸುರಕ್ಷಿತ ಪ್ರದೇಶಗಳಿಗೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರಜೌರಿ ಜಿಲ್ಲೆಯ ನೌಶೆರಾ ಸೆಕ್ಟರ್ ಬಳಿ ಪಾಕಿಸ್ತಾನದ ಮತ್ತೆ ಕದನ ವಿರಾಮವನ್ನು ಉಲ್ಲಂಘನೆ ಮಾಡಿದೆ. ಸಣ್ಣ ಸಣ್ಣ ಶಸ್ತ್ರಾಸ್ತ್ರಗಳನ್ನು ಬಳಸಿ ದಾಳಿ ನಡೆಸುತ್ತಿದೆ. ದಾಳಿಯಿಂದಾಗಿ ಸರ್ಯಾ, ಖಂಬ, ಅನ್ವಾಸ್ ಮತ್ತು ಭಂದರ್ ಪ್ರದೇಶಗಳಲ್ಲಿರುವ ಜನತೆ ತೀವ್ರ ಸಂಕಷ್ಟಕ್ಕೆ ಸಿಲುಕುವಂತಾಗಿದೆ. ಹೀಗಾಗಿ ದಾಳಿ ಪೀಡಿತ ಪ್ರದೇಶದಿಂದ ಈ ವರೆಗೂ 1,500ಕ್ಕೂ ಹೆಚ್ಚು ಜನರನ್ನು ಸ್ಥಳಾಂತರ ಮಾಡಲಾಗಿದೆ ಎಂದು ರಜೌರಿ ಜಿಲ್ಲೆ ಉಪ ಆಯುಕ್ತ ಶಾಹಿದ್ ಇಕ್ಬಾಲ್ ಚೌಧರಿಯವರು ಹೇಳಿದ್ದಾರೆ.