ನವದೆಹಲಿ: ಉತ್ತರಪ್ರದೇಶದ ಸಹರನ್'ಪುರ ಜಿಲ್ಲೆಯಲ್ಲಿ ನಡೆಸ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತುರ್ತು ವಿಚಾರಣೆ ನಡೆಸಲು ಸುಪ್ರೀಂಕೋರ್ಟ್ ಶುಕ್ರವಾರ ನಿರಾಕರಿಸಿದೆ.
ಉತ್ತರಪ್ರದೇಶದ ಸಹರನಾಪುರದಲ್ಲಿ ದಲಿತ ಮತ್ತು ರಜಪೂತ ಸಮುದಾಯಗಳ ನಡುವೆ ಕೆಲ ದಿನಗಳ ಹಿಂದಷ್ಟೇ ಘರ್ಷಣೆ ನಡೆದಿತ್ತು. ಘರ್ಷಣೆಯಲ್ಲಿ ವ್ಯಕ್ತಿಯೋರ್ವ ಸಾವನ್ನಪ್ಪಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿತ್ತು.
ಪ್ರಕರಣ ಸಂಬಂಧ ತನಿಖೆಗೆ ಆದೇಶಿಸಿ ವಿಶೇಷ ತನಿಖಾ ತಂಡವನ್ನು ರಚಿಸುವಂತೆ ಕೋರಿ ಗೌರವ್ ಯಾದವ ಎಂಬ ವಕೀಲ ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದನ್ನು ಸಲ್ಲಿಸಿದ್ದರು. ಅಲ್ಲದೆ, ಸಹರನ್'ಪುರದಲ್ಲಿ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದ್ದು, ನ್ಯಾಯಾಂಗ ಮಧ್ಯಪ್ರವೇಶ ಮಾಡುವ ಅಗತ್ಯವಿದೆ. ಹಿಂಸಾಚಾರದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಪರಿಹಾರ ಘೋಷಣೆ ಮಾಡಬೇಕು ಎಂದು ಹೇಳಿದ್ದರು.
ಅರ್ಜಿ ಸಂಬಂಧ ಇಂದು ವಿಚಾರಣೆ ನಡೆಸಿರುವ ನ್ಯಾಯಾಧೀಶರಾದ ಎಲ್.ನಾಗೇಶ್ವರ ರಾವ್ ಮತ್ತು ನವಿನ್ ಸಿನ್ಹಾ ಅವರಿದ್ದ ಪೀಠ, ಅರ್ಜಿಯನ್ನು ತುರ್ತು ವಿಚಾರಣೆ ನಡೆಸುವಂತಹ ಅಗತ್ಯವಿಲ್ಲ. ಬೇಸಿಗೆ ರಜೆ ಬಳಿಕವೂ ಅರ್ಜಿಯನ್ನು ಪರಿಶೀಲನೆ ನಡೆಸಬಹುದು ಎಂದು ಹೇಳಿದೆ.