ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹೊಡೆದುರುಳಿಸಿದೆ ಎಂದು ಗುರುವಾರ ತಿಳಿದುಬಂದಿದೆ.
ಸೊಪೋರ್ ನ ನಾಟಿಪೋರಾ ಎಂಬ ಪ್ರದೇಶದಲ್ಲಿದ್ದ ಮನೆಯೊಂದರಲ್ಲಿ ಉಗ್ರರು ಅಡಗಿ ಕುಳಿತಿದ್ದರು. ಈ ಕುರಿತಂತೆ ಖಚಿತ ಮಾಹಿತಿ ತಿಳಿದು ಬಂದ ಹಿನ್ನಲೆಯಲ್ಲಿ ಸೇನಾ ಪಡೆ ಬೆಳಿಕ್ಕೆ 3.30ರ ಸುಮಾರಿಗೆ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ಸೇನಾ ಪಡೆ ಮೇಲೆ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಈ ವೇಳೆ ದಾಳಿಗೆ ದಿಟ್ಟ ಉತ್ತರ ನೀಡಿದ ಸೇನಾಪಡೆ ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ. ಇನ್ನು ಸ್ಥಳದಲ್ಲಿ ಮತ್ತಷ್ಟು ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಸೇನಾ ಪಡೆ ಕಾರ್ಯಾಚರಣೆಯನ್ನು ಮುಂದುವರೆಸುತ್ತಿದೆ ಎಂದು ಮೂಲಗಳು ತಿಳಿಸಿವೆ.