ಲಖನೌ: ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲವು ಸಾಧಿಸಿದ್ದು, ಈ ಗೆಲವನ್ನು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಪಕ್ಷದ ಕಾರ್ಯಕರ್ತರಿಗೆ ಅರ್ಪಿಸಿದ್ದಾರೆ.
ಚುನಾವಣೆ ಫಲಿತಾಂಶದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಯೋಗಿ ಆದಿತ್ಯನಾಥ್, ಉತ್ತರ ಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶವೇ ಗುಜರಾತ್ ವಿಧಾನಸಭೆ ಚುನಾವಣೆಯಲ್ಲೂ ಬರಲಿದೆ ಎಂದು ಹೇಳಿದ್ದಾರೆ.
ಗುಜರಾತ್ ಅಭಿವೃದ್ಧಿ ಬಗ್ಗೆ ಮಾತನಾಡುವ ಜನಕ್ಕೆ ತಮ್ಮ ಸ್ವಕ್ಷೇತ್ರ ಅಮೇಥಿಯಲ್ಲಿ ಖಾತೆ ತೆರೆಯಲು ಸಾಧ್ಯವಾಗಿಲ್ಲ ಎಂದು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರ ವಿರುದ್ಧ ಯೋಗಿ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ ಬಿಜೆಪಿ ಸರ್ಕಾರದ ಜವಾಬ್ದಾರಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ಯೋಗಿ ಆದಿತ್ಯನಾಥ್ ಅವರು ಹೇಳಿದ್ದಾರೆ.
ಇನ್ನು ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಪಕ್ಷದ ಗೆಲುವಿನ ಕುರಿತು ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಅಭಿವೃದ್ಧಿಗೆ ಸಿಕ್ಕ ಜಯ ಎಂದಿದ್ದಾರೆ. ದೇಶದಲ್ಲಿ ಮತ್ತೊಮ್ಮೆ ಅಭಿವೃದ್ಧಿ ಗೆಲುವು ಸಾಧಿಸಿದೆ. ಈ ಭರ್ಜರಿ ಗೆಲುವು ನೀಡಿದ ಉತ್ತರ ಪ್ರದೇಶ ಜನತೆಗ ಧನ್ಯವಾದ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪಕ್ಷದ ಗೆಲುವಿಗಾಗಿ ಶ್ರಮಿಸಿದ ಕಾರ್ಯಕರ್ತರಿಗೆ ಶುಭಾಶಗಳನ್ನು ಕೋರಿದ್ದಾರೆ.
ಉತ್ತರ ಪ್ರದೇಶದ 16 ಮಹಾನಗರ ಪಾಲಿಕೆಗಳ ಪೈಕಿ 14ರಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದು, ಪ್ರತಿಪಕ್ಷ ಬಿಎಸ್‌ಪಿ 2 ಪಾಲಿಕೆಗಳಲ್ಲಿ ಗೆಲವು ಸಾಧಿಸಿದೆ.