ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಕೇರಿ ಹಾಗೂ ದಿಗ್ವಾರ್ ಪ್ರದೇಶದಲ್ಲಿರುವ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಸೇನೆ ಕದನ ವಿರಾಮ ಉಲ್ಲಂಘನೆ ಮಾಡಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಗಡಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, 5 ನಾಗರೀಕರಿಗೆ ಗಾಯಗಳಾಗಿದೆ ಎಂದು ಸೋಮವಾರ ತಿಳಿದುಬಂದಿದೆ.
ಕಾಶ್ಮೀರದ ಕೆರ್ನಿ ಪ್ರದೇಶದಲ್ಲಿ ಭಾರತೀಯ ಸೇನೆ ಹಾಗೂ ಪಾಕಿಸ್ತಾನ ಸೇನೆ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ವರದಿಗಳು ತಿಳಿಸಿವೆ.
ಇಂದು ಬೆಳಿಗ್ಗೆ ಪಾಕಿಸ್ತಾನ ಸೇನೆ ಭಾರತೀಯ ಸೇನೆಯನ್ನು ಗುರಿಯಾಗಿರಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಲು ಆರಂಭಿಸಿತ್ತು. ಈ ವೇಳೆ ಗಡಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದು, 5 ನಾಗರೀಕರಿಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪಾಕಿಸ್ತಾನ ಸೇನೆ ಸಣ್ಣ ಹಾಗೂ ಸ್ವಯಂ ಚಾಲಿತ ಶಸ್ತ್ರಾಸ್ತ್ರಗಳು, ಶೆಲ್ ಗಳಿಂದ ದಾಳಿ ನಡೆಸುತ್ತಿದ್ದು, ಪಾಕಿಸ್ತಾನ ಸೇನೆಯ ಅಪ್ರಚೋದಿತ ಗುಂಡಿನ ದಾಳಿಗೆ ಭಾರತೀಯ ಸೇನೆ ದಿಟ್ಟ ಉತ್ತರವನ್ನು ನೀಡುತ್ತಿದೆ. ಪ್ರಸ್ತುತ ಸ್ಥಳದಲ್ಲಿ ಉಭಯ ಸೇನೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ ಎಂದು ತಿಳಿದುಬಂದಿದೆ.