ನವದೆಹಲಿ: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದಾಗಿ ಬಿಹಾರ ಮತ್ತು ಒಡಿಶಾ ರಾಜ್ಯಗಳಲ್ಲಿ ಪ್ರಬಲ ಚಂಡಮಾರುತ ಅಪ್ಪಳಿಸಲಿದ್ದು, ಮುಂದಿನ 48 ಗಂಟೆಗಳ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಎಚ್ಚರಿಕೆಯ ನೀಡಿದೆ.
ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ ಪಶ್ಚಿಮ ಬಂಗಾಳದಲ್ಲಿ ಗಂಗಾನದಿ ಪ್ರದೇಶದಲ್ಲಿ ಉದ್ಭವಿಸಿರುವ ವಾಯುಭಾರ ಕುಸಿತ ಪರಿಸ್ಥಿತಿ ಮತ್ತಷ್ಟು ತೀವ್ರವಾಗಿದ್ದು, ಬಿಹಾರ ಹಾಗೂ ಒಡಿಶಾದಲ್ಲಿ ಮುಂದಿನ 48 ಗಂಟೆಗಳ ಅವಧಿಯಲ್ಲಿ ಚಂಡಮಾರುತ ಹಾಗೂ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹೇಳಿದೆ.
ಪ್ರಮುಖವಾಗಿ ಈಶಾನ್ಯ ರಾಜ್ಯಗಳಿಗೆ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ಕೊಂಕಣ ಮತ್ತು ಗೋವಾ, ತೆಲಂಗಾಣ, ರಾಯಲಸೀಮೆ, ಉತ್ತರ ಕರ್ನಾಟಕದ ಒಳನಾಡು ಮತ್ತು ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಕುರಿತು ಮುನ್ನೆಚ್ಚರಿಕೆ ನೀಡಲಾಗಿದೆ. ಪ್ರತಿಕೂಲ ಹವಾಮಾನದಿಂದಾಗಿ ಈ ತಿಂಗಳ 13 ರವರೆಗೂ ಅಂದರೆ ಮುಂದಿನ ನಾಲ್ಕು ದಿನಗಳಾ ಬಿರುಗಾಳಿ ಸಹಿತ ಭಾರೀ ಮಳೆ ಬೀಳಲಿದೆ. ಇನ್ನು ಬಿರುಗಾಳಿ ನಿಧಾನವಾಗಿ ಪಶ್ಚಿಮ-ನೈರುತ್ಯ ದಿಕ್ಕಿನಲ್ಲಿ ಚಲಿಸುವ ಸಾಧ್ಯತೆ ಇದ್ದು, 24 ಗಂಟೆಗಳ ಬಳಿಕ ಉತ್ತರಾಭಿಮುಖವಾಗಿ ಸಂಚರಿಸಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಮುಂದಿನ 24 ಗಂಟೆ ಕಾಲ ಸಮುದ್ರಗಳಿಗೆ ಇಳಿಯಬಾರದು ಎಂದೂ ಇಲಾಖೆ ಎಚ್ಚರಿಕೆ ನೀಡಿದೆ.