ಪಾಕ್ ಗೆ ಅಮೆರಿಕ ಹತ್ತಿರ...ಟ್ರಂಪ್ ಗೆ ಮತ್ತೊಂದು ಅಪ್ಪುಗೆ ಬೇಕು ಎಂದು ರಾಹುಲ್ ಗಾಂಧಿ ವ್ಯಂಗ್ಯ
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಮೆರಿಕ ಮತ್ತು ಪಾಕಿಸ್ತಾನದ ನಡುವಿನ ಸಂಬಂಧದ ಕುರಿತು ವ್ಯಂಗ್ಯವಾಡಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ಅಮೆರಿಕ ಮತ್ತು ಪಾಕಿಸ್ತಾನದ ನಡುವಿನ ಸಂಬಂಧದ ಕುರಿತು ವ್ಯಂಗ್ಯವಾಡಿದ್ದಾರೆ.
ಇತ್ತೀಚೆಗಷ್ಟೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಡಿದ್ದ ಟ್ವೀಟ್ ಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ರಾಹುಲ್ ಗಾಂಧಿ, ಮೋದಿ ಜೀ ತ್ವರೆ ಮಾಡಿ: ಡೊನಾಲ್ಡ್ ಟ್ರಂಪ್ ಅವರಿಗೆ ಮತ್ತೊಂದು ಅಪ್ಪುಗೆ ಬೇಕು ಎಂದು ಕಾಣಿಸುತ್ತದೆ ಎಂದು ಪ್ರಧಾನಿ ಮೋದಿ ಕಾಲೆಳೆಯುವ ಪ್ರಯತ್ನ ಮಾಡಿದ್ದಾರೆ.
ಪಾಕಿಸ್ತಾನದಲ್ಲಿ ಕುಖ್ಯಾತ ಹಖ್ಖಾನಿ ನೆಟ್ವರ್ಕ್ ಉಗ್ರರ ಕಪಿಮುಷ್ಟಿಯಲ್ಲಿ ಸಿಲುಕಿಕೊಂಡಿದ್ದ ಕೆನಡಾ ಮೂಲದ ಕುಟುಂಬವನ್ನು ಇತ್ತೀಚೆಗೆ ಪಾಕಿಸ್ತಾನ ಸೇನೆ ಕಾರ್ಯಾಚರಣೆ ನಡೆಸಿ ಸುರಕ್ಷಿತವಾಗಿ ಬಿಡಿಸಿಕೊಂಡು ಬಂದಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಟ್ವೀಟ್ ಮಾಡಿದ್ದ ಟ್ರಂಪ್, ಪಾಕಿಸ್ತಾನದೊಂದಿಗಿನ ಸಂಬಂಧ ಸುಧಾರಣೆಗೆ ಕ್ರಮ ಕೈಗೊಂಡಿದ್ದೇವೆ. ಪಾಕಿಸ್ತಾನದ ಸಹಕಾರಕ್ಕೆ ಧನ್ಯವಾದ ಎಂದು ಟ್ವೀಟ್ ಮಾಡಿದ್ದರು. ಈ ಟ್ವೀಟ್ ಅನ್ನು ಹಿನ್ನಲೆಯಾಗಿಟ್ಟುಕೊಂಡು ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ಪ್ರಧಾನಿ ನರೇಂದ್ರ ಮೋದಿ ಅವರ ಒಂದು ಅಪ್ಪುಗೆ ಟ್ರಂಪ್ ಗೆ ಸಾಲದು ಎಂದು ಕಾಣುತ್ತದೆ. ಮತ್ತೊಂದು ಅಪ್ಪುಗೆ ಬೇಕೇನೋ..ಹೀಗಾಗಿ ಪಾಕಿಸ್ತಾನಕ್ಕೆ ಹತ್ತಿರವಾಗುತ್ತಿದ್ದಾರೆ ಎಂಬ ಧಾಟಿಯಲ್ಲಿ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.