ನವದೆಹಲಿ: ಗೌರಿ ಲಂಕೇಶ್ ಹತ್ಯೆಯನ್ನು ಕೇಂದ್ರ ವಾರ್ತಾ ಮತ್ತು ಪ್ರಸಾರ ಖಾತೆ ಸಚಿವೆ ಸ್ಮೃತಿ ಇರಾನಿ ಖಂಡಿಸಿದ್ದಾರೆ. ತ್ವರಿತ ತನಿಖೆ ಮೂಲಕ ತಪ್ಪಿತಸ್ಥರನ್ನು ಪತ್ತೆ ಹಚ್ಚಿ ಶಿಕ್ಷಿಸಬೇಕೆಂದು ಅವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಗೌರಿ ಲಂಕೇಶ್ ಹತ್ಯೆಯನ್ನು ಖಂಡಿಸುತ್ತೇನೆ. ಪ್ರಕರಣದ ತ್ವರಿತ ವಿಚಾರಣೆ ನಡೆಸಿ ನ್ಯಾಯ ದೊರಕಿಸಿಕೊಡಬಹುದೆಂದು ಭಾವಿಸುತ್ತೇನೆ. ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ದೇವರು ಕರುಣಿಸಲಿ ಎಂದು ಹೇಳಿದ್ದಾರೆ.
ಗೌರಿ ಲಂಕೇಶ್ ಹತ್ಯೆಯನ್ನು ಕೇಂದ್ರ ಸಚಿವ ರಾಜ್ಯವರ್ಧನ್ ಸಿಂಗ್ ರಾಥೋರ್ ತೀವ್ರವಾಗಿ ಖಂಡಿಸಿದ್ದಾರೆ.
ಗೌರಿ ಲಂಕೇಶ್ ನಿನ್ನೆ ರಾತ್ರಿ 8 ಗಂಟೆ ಸುಮಾರಿಗೆ ಬೆಂಗಳೂರಿನ ತಮ್ಮ ರಾಜರಾಜೇಶ್ವರಿ ನಗರದ ನಿವಾಸದ ಮುಂದೆ ದುಷ್ಕರ್ಮಿಗಳಿಂದ ಗುಂಡಿಗೆ ಹತ್ಯೆಗೀಡಾಗಿದ್ದರು.