ನವದೆಹಲಿ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು 2012ರ ನಂತರ ಜೈಲುಗಳಲ್ಲಿ ಅಸ್ವಾಭಾವಿಕವಾಗಿ ಸಾವನ್ನಪ್ಪಿದ ಕೈದಿಗಳ ಸಂಬಂಧಿಗಳಿಗೆ ಸೂಕ್ತ ಪರಿಹಾರ ನೀಡಲಾಗಿದೆಯೇ ಎಂಬುದನ್ನು ಗುರುತಿಸುವಂತೆ ಶುಕ್ರವಾರ ಸುಪ್ರೀಂ ಕೋರ್ಟ್ ದೇಶದ ಎಲ್ಲಾ ಹೈಕೋರ್ಟ್ ಗಳಿಗೆ ಸೂಚಿಸಿದೆ.
ಜೈಲು ಸುಧಾರಣೆಗೆ ಸಂಬಂಧಿಸಿದಂತೆ ಕೆಲವು ನಿರ್ದೇಶನಗಳನ್ನು ನೀಡಿರುವ ಸುಪ್ರೀಂ ಕೋರ್ಟ್, ಕೈದಿಗಳ ಪರವಾಗಿ ವಿಶೇಷವಾಗಿ ಮೊದಲ ಬಾರಿಗೆ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿರುವವರ ಪರವಾಗಿ ವಾದ ಮಂಡಿಸಲು ವಕೀಲರನ್ನು ನೇಮಿಸುವಂತೆ ರಾಜ್ಯ ಸರ್ಕಾರಗಳಿಗೆ ಆದೇಶಿಸಿದೆ.
ಜೈಲಿನಲ್ಲಿ ಕೈದಿಗಳಿಗೆ ಸೂಕ್ತ ವೈದ್ಯಕೀಯ ನೆರವು ಸಿಗುತ್ತಿದೆಯೇ ಎಂಬುದರ ಕುರಿತು ಅಧ್ಯಯನ ನಡೆಸುವಂತೆ ಹಾಗೂ ಈ ಸಂಬಂಧ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕೋರ್ಟ್ ರಾಜ್ಯ ಸರ್ಕಾರಗಳಿಗೆ ಸೂಚಿಸಿದೆ.
ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ 2012ರಿಂದ 2015ರ ಅವಧಿಯಲ್ಲಿ ಜೈಲಿನಲ್ಲಿ ಸಂಭವಿಸಿದ ಅಸ್ವಾಭಾವಿಕ ಸಾವುಗಳ ಕುರಿತು ಸ್ಪಯಂ ಪ್ರೇರಿತ ದೂರು ದಾಖಲಿಸಿಕೊಂಡು, ಮೃತ ಕೈದಿಗಳ ಕುಟುಂಬಕ್ಕೆ ಪರಿಹಾರ ನೀಡಲಾಗಿದೆಯೇ ಎಂಬುದನ್ನು ಪತ್ತೆ ಹಚ್ಚುವಂತೆ ನಾವು ಎಲ್ಲಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಲ್ಲಿ ಮನವಿ ಮಾಡಿಕೊಳ್ಳುತ್ತೇವೆ ಎಂದು ನ್ಯಾಯಮೂರ್ತಿ ಎಂ ಬಿ ಲೋಕುರ್ ಮತ್ತು ನ್ಯಾಯಮೂರ್ತಿ ದೀಪಕ್ ಗುಪ್ತಾ ಅವರನ್ನೊಳಗೊಂಡ ಸುಪ್ರೀಂ ಪೀಠ ಹೇಳಿದೆ. ಅಲ್ಲದೆ ಈ ಆದೇಶದ ಪ್ರತಿಯನ್ನು ಒಂದು ವಾರದೊಳಗೆ ಎಲ್ಲಾ ಹೈಕೋರ್ಟ್ ಗಳ ರಿಜಿಸ್ಟ್ರಾರ್ ಜನರಲ್ ಗೆ ಕಳುಹಿಸುವಂತೆ ಸುಪ್ರೀಂ ಕೋರ್ಟ್ ಸೆಕ್ರೆಟರಿ ಜನರಲ್ ಗೆ ಸೂಚಿಸಿದೆ.