ಲಖನೌ: ಬನಾರಸ್ ಹಿಂದೂ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಗೆ ಚುಡಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದ ಪ್ರತಿಭಟನೆಯ ವೇಳೆ ನಡೆದ ಹಿಂಸಾಚಾರ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಮಂಗಳವಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ.
ವಿವಿ ಕ್ಯಾಂಪಸ್‌ನಲ್ಲಿ ನಡೆದ ಹಿಂಸಾಚಾರ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ವಕ್ತಾರ, ಸಚಿವ ಶ್ರೀಕಾಂತ್ ಶರ್ಮಾ ಅವರು ತಿಳಿಸಿದ್ದಾರೆ.
ಇಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಶರ್ಮಾ ಅವರು ಈ ವಿಚಾರ ತಿಳಿಸಿದ್ದಾರೆ. ಆದರೆ ನ್ಯಾಯಾಂಗ ತನಿಖೆಯನ್ನು ನಿವೃತ್ತ ನ್ಯಾಯಾಧೀಶರಿಂದ ಅಥವಾ ಹಾಲಿ ನ್ಯಾಯಾಧೀಶರಿಂದ ನಡೆಸುತ್ತಾರೋ ಎಂಬುದರ ಬಗ್ಗೆ ಯಾವುದೇ ಮಾಹಿತಿ ನೀಡಲು ನಿರಾಕರಿಸಿದ್ದಾರೆ.
ಕಳೆದ ಶನಿವಾರ ಪ್ರತಿಭಟನೆಯ ವೇಳೆ ನಡೆದ ಘರ್ಷಣೆಯಲ್ಲಿ ಮಹಿಳೆಯರು ಸೇರಿದಂತೆ ಹಲವು ವಿದ್ಯಾರ್ಥಿನಿಯರು, ಇಬ್ಬರು ಪತ್ರಕರ್ತರು ಗಾಯಗೊಂಡಿದ್ದರು.
ಇನ್ನು ಪೊಲೀಸರು ದೌರ್ಜನ್ಯ ಖಂಡಿಸಿರುವ ವಿರೋಧ ಪಕ್ಷಗಳು ಬಿಜೆಪಿಯನ್ನು ಗುರಿಯಾಗಿಸಿ ಆಕ್ರೋಶ ವ್ಯಕ್ತಪಡಿಸಿವೆ. ಈ ನಡುವೆ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಅಧ್ಯಕ್ಷ ಅಮಿತ್ ಷಾ ಅವರು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಕರೆ ಮಾಡಿ ಘಟನೆಯ ಬಗ್ಗೆ ಶೀಘ್ರ ಕ್ರಮ ಕೈಗೊಳ್ಳುವಂತೆ ಸೂಚಿಸಿದ್ದರು.