ಕಾವೇರಿ ವಿವಾದ; ಮೇ.3ರೊಳಗೆ ಕರಡು ಯೋಜನೆ ರೂಪಿಸಿ- ಕೇಂದ್ರಕ್ಕೆ 'ಸುಪ್ರೀಂ'
ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ತೀರ್ಪನ್ನು ಅನುಷ್ಠಾನಕ್ಕೆ ತರಲು ಮೇ.3ರೊಳಗೆ ಕರಡು ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೋಮವಾರ ಸೂಚನೆ ನೀಡಿದೆ...
ನವದೆಹಲಿ; ಕಾವೇರಿ ನದಿ ನೀರು ವಿವಾದಕ್ಕೆ ಸಂಬಂಧಿಸಿದಂತೆ ನೀಡಲಾಗಿದ್ದ ತೀರ್ಪನ್ನು ಅನುಷ್ಠಾನಕ್ಕೆ ತರಲು ಮೇ.3ರೊಳಗೆ ಕರಡು ಯೋಜನೆ ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್ ಸೋಮವಾರ ಸೂಚನೆ ನೀಡಿದೆ.
ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಮತ್ತಷ್ಟು ಕಾಲಾವಕಾಶ ನೀಡಬೇಕೆಂದು ಕೋರಿ ಈ ಹಿಂದೆ ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್ ಬಳಿ ಮನವಿ ಮಾಡಿಕೊಂಡಿತ್ತು. ಇದರಂತೆ ತಮಿಳುನಾಡು ಸರ್ಕಾರ ಕೂಡ ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು.
ತಮಿಳುನಾಡು ಸಲ್ಲಿಸಿದ್ದ ನ್ಯಾಯಾಂಗ ನಿಂದರೆ ಕುರಿತು ಅರ್ಜಿಯನ್ನು ಇಂದು ವಿಚಾರಣೆ ನಡೆಸಿರುವ ನ್ಯಾಯಾಲಯ, ಮೇ.3ರೊಳಗೆ ಕಾವೇರಿ ನಿರ್ವಹಣಾ ಮಂಡಳಿ ರಚನೆ ಕುರಿತು ಕರಡು ಸಲ್ಲಿಸುವಂತೆ ಸೂಚನೆ ನೀಡಿದೆ. ಅಲ್ಲದೆ, ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಅಂತಿಮ ತೀರ್ಪು ನೀಡುವವರೆಗೂ ತಮಿಳುನಾಡು ಹಾಗೂ ಕರ್ನಾಟಕ ರಾಜ್ಯಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಶಾಂತಿ ಕಾಪಾಡಬೇಕೆಂದು ಸೂಚಿಸಿದೆ.
6 ವಾರಗಳೊಳಗೆ ಕರಡು ಯೋಜನೆ ಸಿದ್ಧಪಡಿಸುವಂತೆ ಸೂಚನೆ ನೀಡಿದ್ದರೂ ಕೇಂದ್ರ ಸರ್ಕಾರ ಈ ನಿಟ್ಟಿನಲ್ಲಿ ವಿಫಲವಾಗಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿರುವ ಸುಪ್ರೀಂಕೋರ್ಟ್, ತಮಿಳುನಾಡು ರಾಜ್ಯದ ಸಂಕಷ್ಟ ಅರ್ಥವಾಗುತ್ತದೆ. ಆ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಲಯ ಪದೇ ಪದೇ ಹೇಳಿದೆ. ಅಲ್ಲದೆ, ಕೇಂದ್ರ ತುರ್ತು ಕ್ರಮ ಕೈಗೊಳ್ಳದ ಕುರಿತಂತೆಯೂ ಅಸಮಾಧಾನ ವ್ಯಕ್ತಪಡಿಸಿದೆ ಎಂದು ತಿಳಿದುಬಂದಿದೆ.
ನೀವು ಯೋಜನೆಯನ್ನು ಸಿದ್ಧಪಡಿಸಲೇಬೇಕು. ಇದರಿಂದ ತಪ್ಪಿಸಿಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್ ಕೇಂದ್ರಕ್ಕೆ ತಾಕೀತು ಮಾಡಿದೆ.
ಸುಪ್ರೀಂಕೋರ್ಟ್ ನೀಡಿರುವ ಆದೇಶದಂತೆ ಕರಡು ಪ್ರತಿ ಸಲ್ಲಿಸಲಿರುವ ಕೇಂದ್ರ ಸರ್ಕಾರ ಕರ್ನಾಟಕ, ತಮಿಳುನಾಡು, ಕೇರಳ ಮತ್ತು ಪುದುಚೇರಿ ರಾಜ್ಯಗಳಿಗೆ ಕಾವೇರಿ ನದಿ ನೀರನ್ನು ಹೇಗೆ ಹಂಚಿಕೆ ಮಾಡಲಾಗುತ್ತದೆ ಎಂಬುದರ ಕುರಿತು ವಿವರಣೆ ನೀಡಬೇಕಾಗಿದೆ. ಹೀಗಾಗಿ ಕೇಂದ್ರ ಸರ್ಕಾರ ಮುಂದಿನ ನಡೆ ಸಾಕಷ್ಟು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.
ಕಾವೇರಿ ವಿವಾದ ಕುರಿತು ಫೆ.16 ರಂದು ಅಂತಿಮ ತೀರ್ಪು ನೀಡಿದ್ದ ಸುಪ್ರೀಂಕೋರ್ಟ್ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಸೂಚನೆ ನೀಡಿತ್ತು. ಆದರೆ, ಕೇಂದ್ರ ಸರ್ಕಾರ ಮಂಡಳಿ ರಚನೆ ಮಾಡುವಲ್ಲಿ ವಿಫಲವಾಗಿತ್ತು ಎಂದು ಹೇಳಿ ತಮಿಳನಾಡು ಸರ್ಕಾರ ಕೇಂದ್ರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿತ್ತು. ಈಗಲೂ ತಮಿಳುನಾಡಿನಾದ್ಯಂತ ಕೇಂದ್ರ ಸರ್ಕಾರದ ವಿರುದ್ಧ ಹಲವು ಪ್ರತಿಭಟನೆಗಳು ಮುಂದುವರೆದಿವೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.