ಉನ್ನಾವೋ ಅತ್ಯಾಚಾರ ಪ್ರಕರಣ: ಬಿಜೆಪಿ ಶಾಸಕ ಕುಲ್ದೀಪ್ ಸಿಂಗ್ ವಿರುದ್ಧ ಎಫ್ಐಆರ್, ಪ್ರಕರಣ ಸಿಬಿಐಗೆ ಹಸ್ತಾಂತರ
ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಅತ್ಯಾಚಾರ ಹಾಗೂ ಸಂತ್ರಸ್ತೆಯ ತಂದೆಯ ಸಾವು ಪ್ರಕರಣ ಸಿಬಿಐಗೆ ಹಸ್ತಾಂತರಿಸಲಾಗಿದೆ...
ಲಖನೌ: ಉತ್ತರ ಪ್ರದೇಶದ ಉನ್ನಾವೋ ಜಿಲ್ಲೆಯ ಅತ್ಯಾಚಾರ ಹಾಗೂ ಸಂತ್ರಸ್ತೆಯ ತಂದೆಯ ಸಾವು ಪ್ರಕರಣ ಸಿಬಿಐಗೆ ಹಸ್ತಾಂತರಿಸಲಾಗಿದೆ.
ಪ್ರಕರಣ ಸಂಬಂಧ ಆರೋಪಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಲಾಗಿದೆ.
ಉನ್ನಾವೋ ಅತ್ಯಾಚಾರ ಪ್ರಕರಣವನ್ನು ಉತ್ತರ ಪ್ರದೇಶ ಸರ್ಕಾರ ಸಿಬಿಐ ತನಿಖೆಗೆ ಆದೇಶಿಸಿತ್ತು. ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಎಸ್ಐಟಿಯ ವರದಿ ಅನ್ವಯ ಶಾಸಕರ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಸೂಚನೆ ನೀಡಿತ್ತು.
ಇನ್ನು ಸಂತ್ರಸ್ತೆಯ ತಂದೆಗೆ ಸೂಕ್ತ ಚಿಕಿತ್ಸೆ ನೀಡದ ಕಾರಣ ಡಾ. ಡಿಕೆ ದ್ವಿವೇದಿ ಮತ್ತು ಡಾರ್ ಪ್ರಶಾಂತ್ ಉಪಾದ್ಯಾಯ ಅವರನ್ನು ಅಮಾನತು ಮಾಡಲಾಗಿದೆ. ಇನ್ನು ಸಂತ್ರಸ್ತೆ ನೀಡಿದ ದೂರನ್ನು ಸ್ವೀಕರಿಸದ ಸಫೀಪುರ್ ಸರ್ಕಲ್ ಆಫೀಸರ್ ಕುನ್ವಾರ್ ಬಹದ್ದೂರ್ ಸಿಂಗ್ ಅವರನ್ನು ಅಮಾನತು ಮಾಡಲಾಗಿದೆ.
ಬಿಜೆಪಿ ಶಾಸಕ ಹಾಗೂ ಅವರ ಸಹಚರರು ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯ ಕುಟುಂಬ ಸದಸ್ಯರು ಭಾನುವಾರ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ನಿವಾಸದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಕಳೆದ ವರ್ಷ ಜೂನ್ ತಿಂಗಳಲ್ಲಿ ಉನ್ನಾವೋದ 16 ವರ್ಷದ ಬಾಲಕಿಯನ್ನು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ಪ್ರಮುಖ ಆರೋಪಿಯಾಗಿದ್ದಾರೆ.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.