ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರು ಉಪಟಳ ಹೆಚ್ಚಾಗಿದ್ದು, ವ್ಯಕ್ತಿಯೊಬ್ಬ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿ ಸ್ಥಳದಿಂದ ಕಾಲ್ಕಿತ್ತಿರುವ ಘಟನೆ ಕಾಶ್ಮೀರದ ಶೋಪಿಯಾಜನ್ ಜಿಲ್ಲೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಶೋಪಿಯಾನ್ ಜಿಲ್ಲೆಯ ನಿವಾಸಿಯಾಗಿರುವ ಕಫಿಯತ್ ಮಿರ್ ಎಂಬುವರರ ಮೇಲೆ ಉಗ್ರರು ಪಿಂಜೂರಾ ಎಂಬ ಪ್ರದೇಶದಲ್ಲಿ ಗುಂಡಿನ ದಾಳಿ ನಡೆಸಿ ಸ್ಥಳದಿಂದ ಪರಾರಿಯಾಗಿದ್ದಾರೆಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಉಗ್ರರು ಗುಂಡಿನ ದಾಳಿ ನಡೆಸುತ್ತಿದ್ದಂತೆಯೇ ರಕ್ತದ ಮಡುವಿನಲ್ಲಿ ಬಿದ್ದಿದ್ದ ಮಿರ್ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಲಾಗಿದೆ. ಪ್ರಸ್ತುತ ಮಿರ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆಂದು ತಿಳಿದುಬಂದಿದೆ.
ಉಗ್ರರು ದಾಳಿ ನಡೆಸುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿರುವ ಭದ್ರತಾಪಡೆಗಳು ಕಾರ್ಯಾಚರಣೆ ಆರಂಭಿಸಿವೆ.