ಚೆನ್ನೈ: ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಮುತ್ತುವೇಲ್ ಕರುಣಾನಿಧಿ ಅವರ ಅಂತಿಮ ದರ್ಶನದ ವೇಳೆ ಕಾಲ್ತುಳಿತ ಸಂಭವಿಸಿದ್ದು, ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.
ಚೆನ್ನೈನ ರಾಜಾಜಿ ಹಾಲ್ ನಲ್ಲಿ ಕರುಣಾನಿಧಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ. ಘಟನೆಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದ್ದಾರೆ.
ಕಾಲ್ತುಳಿತದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂಬ ವರದಿ ಹಿನ್ನೆಲೆಯಲ್ಲಿ ಕರುಣಾನಿಧಿ ಪುತ್ರ ಹಾಗೂ ಡಿಎಂಕೆ ಕಾರ್ಯಾಧ್ಯಕ್ಷ ಎಂ.ಕೆ.ಸ್ಟಾಲಿನ್ ಅವರು, ಶಾಂತಿ ಕಾಪಾಡುವಂತೆ ಪಕ್ಷದ ಕಾರ್ಯಕರ್ತರಿಗೆ ಮನವಿ ಮಾಡಿದ್ದಾರೆ.
ರಾಜಾಜಿ ಹಾಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಸ್ಟಾಲಿನ್, ತಮಿಳುನಾಡು ಸರ್ಕಾರ ಅನಗತ್ಯವಾಗಿ ಗೊಂದಲ ಸೃಷ್ಟಿಸುತ್ತಿದ್ದು, ಜನ ಅದಕ್ಕೆ ಕಿವಿಗೊಡದೆ ಶಾಂತಿ ಕಾಪಾಡಬೇಕು ಮತ್ತು ಪ್ರತಿಯೊಬ್ಬರು ಕಲೈನಾರ್ ಅಂತಿಮ ದರ್ಶನ ಪಡೆಯಲು ಅವಕಾಶ ಕಲ್ಪಿಸಬೇಕು ಎಂದು ಕೇಳಿಕೊಂಡಿದ್ದಾರೆ.
ಐದು ಬಾರಿ ತಮಿಳುನಾಡು ಮುಖ್ಯಮಂತ್ರಿಯಾಗಿದ್ದ 94 ವರ್ಷದ ಎಂ ಕರುಣಾನಿಧಿ ಅವರು ನಿನ್ನೆ ಕಾವೇರಿ ಆಸ್ಪತ್ರೆಯಲ್ಲಿ ನಿಧನರಾಗಿದ್ದು, ಇಂದು ರಾಜಾಜಿ ಹಾಲ್ ನಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. 4 ಗಂಟೆಗೆ ಅಂತಿಮ ಯಾತ್ರೆ ಆರಂಭವಾಗಲಿದ್ದು, ಸಂಜೆ ಮರೀನಾ ಬೀಚ್ ನಲ್ಲಿ ಅಂತ್ಯಕ್ರಿಯೆ ನಡೆಯಲಿದೆ.