ನವದೆಹಲಿ: ಎಸ್‌ಸಿ/ಎಸ್‌ಟಿ ಕಾಯಿದೆಯನ್ನು ದುರ್ಬಲಗೊಳಿಸಲಾಗುತ್ತಿದೆ ಎಂಬ ದಲಿತ ಸಂಘಟನೆಗಳ ಆರೋಪದ ಹಿನ್ನಲೆಯಲ್ಲಿ ಅದನ್ನು ಪುನರ್ ಸ್ಥಾಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಮಂಡಿಸಿದ್ದ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಮಸೂದೆ 2018 ಅನ್ನು ಗುರುವಾರ ರಾಜ್ಯಸಭೆಯಲ್ಲಿ ಅಂಗೀಕರಿಸಲಾಗಿದೆ.
ಈ ಮಸೂದೆಯನ್ನು ಈಗಾಗಲೇ ಲೋಕಸಭೆಯಲ್ಲಿ ಅಂಗೀಕರಿಸಲಾಗಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಸಹಿ ಹಾಕಿದ ನಂತರ ಕಾನೂನು ಜಾರಿಗೆ ಬರಲಿದೆ.
ಇಂದು ರಾಜ್ಯಸಭೆಯಲ್ಲಿ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಮಸೂದೆ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಾಮಾಜಿಕ ನ್ಯಾಯ ಸಚಿವ ತಾವರ್ ಚಂದ್ ಗೆಹ್ಲೋಟ್ ಅವರು, ನರೇಂದ್ರ ಮೋದಿ ಸರ್ಕಾರ ದಲಿತ ಕಲ್ಯಾಣಕ್ಕೆ ಮತ್ತು ಬಡವರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದರು. ಅಲ್ಲದೆ ಯಾವುದೇ ಒತ್ತಡಕ್ಕೆ ಮಣಿದು ಈ ಮಸೂದೆಯನ್ನು ಮಂಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ದಾಖಲಾಗುವ ಪ್ರಕರಣದಲ್ಲಿ ತನಿಖಾಧಿಕಾರಿ ಯಾರ ಒಪ್ಪಿಗೆಯೂ ಇಲ್ಲದೆಯೇ ಆರೋಪಿಯನ್ನು ಬಂಧಿಸಲು ಮತ್ತು ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲು ಪ್ರಾಥಮಿಕ ವಿಚಾರಣೆಯ ಅಗತ್ಯವಿಲ್ಲ.
ಸುಪ್ರೀಂ ಕೋರ್ಟ್ ಮಾರ್ಚ್ 20ರಂದು, ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಆರೋಪಿಗಳನ್ನು ಬಂಧಿಸಲು ಹಿರಿಯ ಪೊಲೀಸ್ ಅಧಿಕಾರಿಯ ಒಪ್ಪಿಗೆ ಅಗತ್ಯ ಮತ್ತು ಪ್ರಕರಣ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ ಕಾಯ್ದೆ ಬರುತ್ತದೆಯೇ ಎಂಬ ಬಗ್ಗೆ ಉಪ ಪೊಲೀಸ್ ವರಿಷ್ಠಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಹೇಳಿತ್ತು.
ಸರ್ವೋಚ್ಚ ನ್ಯಾಯಾಲಯದ ಈ ಆದೇಶಕ್ಕೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತಪಡಿಸಿದ ದಲಿತಪರ ಸಂಘಟನೆಗಳು, ದೇಶ ವ್ಯಾಪಿ ಬಂದ್‌ಗೆ ಕರೆ ನೀಡಿ, ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದವು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos