ಪುಲ್ವಾಮ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮದಲ್ಲಿರುವ ಮುರ್ರನ್ ಎಂಬ ಪ್ರದೇಶದಲ್ಲಿ ನಾಗರೀಕನೊಬ್ಬನ ಮನೆಗೆ ನುಗ್ಗಿರುವ ಉಗ್ರರು, ವ್ಯಕ್ತಿಯೊಬ್ಬನನ್ನು ಅಪಹರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.
ಇಂದು ಬೆಳಿಗ್ಗೆ ಮುರ್ರನ್ ಎಂಬ ಪ್ರದೇಶದಲ್ಲಿರುವ ಮನೆಯೊಂದಕ್ಕೆ ನುಗ್ಗಿರುವ ಉಗ್ರರು ಗುಲ್ಜರ್ ಭಟ್ ಎಂಬುವವರನ್ನು ಅಪಹರಿಸಿದ್ದಾರೆ. ನಂತರ ಆತನ ಮೇಲೆ ಮನಬಂದಂತೆ ಗುಂಡು ಹಾರಿಸಿ ಹತ್ಯೆಗೈದು ಸ್ಥಳದಿಂದ ಪರಾರಿಯಾಗಿದ್ದಾರೆ.
ಅಪಹರಣದ ಸುದ್ದಿ ತಿಳಿಯುತ್ತಿದ್ದಂತೆಯೇ ಗುಲ್ಜರ್ ಭಟ್ ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು. ಈ ವೇಳೆ ಗುಂಡು ಹೊಕ್ಕಿ ಸಾವನ್ನಪ್ಪಿರುವ ಸ್ಥಿತಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಹಿಜ್ಬುಲ್ ಮುಜಾಹಿದ್ದೀನ್ ಉಗ್ರ ಸಂಘಟನೆಗೆ ಸೇರ್ಪಡೆಗೊಂಡಿರುವ ಜಹೂರ್ ಥೊಕರ್ ಹಾಗೂ ಶೌಕತ್ ದಾರ್ ನೇತೃತ್ವದ ತಂಡ ಈ ಕೃತ್ಯ ನಡೆಸಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.