ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಉಗ್ರರು ಹಾಗೂ ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಈ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆಂದು ಶುಕ್ರವಾರ ತಿಳಿದುಬಂದಿದೆ.
ಇಂದು ಬೆಳಿಗ್ಗೆ ಕುಲ್ಪಾರ ಜಿಲ್ಲೆಯ ಕಛ್ಲು ಗ್ರಾಮದ ಕ್ರಾಲ್ಗುಂಡ್ ಎಂಬ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವುದಾಗಿ ಮಾಹಿತಿಗಳು ತಿಳಿದುಬಂದಿತ್ತು. ಈ ಹಿನ್ನಲೆಯಲ್ಲಿ ಸೇನಾ ಪಡೆ ಉಗ್ರರ ವಿರುದ್ಧ ಕಾರ್ಯಾಚರಣೆ ನಡೆಸಲು ಆರಂಭಿಸಿತ್ತು.
ಈ ವೇಳೆ ಉಗ್ರರು ಭದ್ರತಾ ಪಡೆಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದಾರೆ. ಕೂಡಲೇ ಸೇನಾ ಪಡೆ ಸ್ಥಳ ಸುತ್ತುವರೆದು ಎನ್ ಕೌಂಟರ್ ನಡೆಸಲು ಆರಂಭಿಸಿತ್ತು. ಘಟನೆ ವೇಳೆ ಓರ್ವ ಯೋಧ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಯೋಧರೊಬ್ಬರು ಹುತಾತ್ಮರಾಗಿದ್ದು, ಉಗ್ರರು ತಪ್ಪಿಸಿಕೊಂಡಿದ್ದಾರೆಂದು ಹೇಳಲಾಗುತ್ತಿದೆ.
ತಲೆಮರೆಸಿಕೊಂಡಿರುವ ಉಗ್ರರಿಗಾಗಿ ಇದೀಗ ಭದ್ರತಾ ಪಡೆಗಳು ಭಾರೀ ಕಾರ್ಯಾಚರಣೆ ನಡೆಸುತ್ತಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ.