ನವದೆಹಲಿ : ಪಶ್ಚಿಮ ಬಂಗಾಳದಲ್ಲಿ ಅವಿರೋಧವಾಗಿ ಆಯ್ಕೆಯಾಗಿರುವ 20 ಸಾವಿರ ಸ್ಥಳೀಯ ಸಂಸ್ಥೆಗಳ ಚುನಾವಣೆ ರದ್ದುಪಡಿಸುವಂತೆ ಸಿಪಿಐ ( ಎಂ) ಹಾಗೂ ಬಿಜೆಪಿ ಸಲ್ಲಿಸಿದ ಅರ್ಜಿಗೆ ಸುಪ್ರೀಂಕೋರ್ಟ್ ನಲ್ಲಿ ಹಿನ್ನಡೆ ಆಗಿದ್ದು, ಮಮತಾ ಬ್ಯಾನರ್ಜಿ ಅವರಿಗೆ ಉಸಿರು ಬಂದಂತಾಗಿದೆ.
ಈ ಎಲ್ಲಾ ಸ್ಥಾನಗಳಲ್ಲಿ ವಿರೋಧ ಇಲ್ಲದ ಹಿನ್ನೆಲೆಯಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ಸಿನ ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದರು. ತಮ್ಮ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುವುದನ್ನು ತಡೆಯಲಾಗಿತ್ತು ಎಂದು ಪ್ರತಿಪಕ್ಷಗಳು ಆರೋಪಿಸಿದ್ದವು.
ಆದಾಗ್ಯೂ, ಈ ಆರೋಪಗಳನ್ನು ಗಮನಿಸಿದ ಸುಪ್ರೀಂಕೋರ್ಟ್, ಅನ್ಯಾಯಕ್ಕೊಳಗಾದ ಅಭ್ಯರ್ಥಿಗಳು ಚುನಾವಣೆಗೆ ಸಂಬಂಧಿಸಿದ ದೂರನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಬಹುದು ಎಂದು ಹೇಳಿಕೆ ನೀಡಿತು.
ಚುನಾವಣೆಗೆ ಸಂಬಂಧಿಸಿದ ದೂರನ್ನು ಸಲ್ಲಿಸುವ 30 ದಿನಗಳ ಅವಧಿ ಮಿತಿಯ ಅವಧಿ ಮುಗಿದಿದ್ದರಿಂದ ಸುಪ್ರೀಂಕೋರ್ಟ್ ಮುಖ್ಯನ್ಯಾಯಾಧೀಶ ದೀಪಕ್ ಮಿಶ್ರಾ , ಎ.ಎಂ. ಖನ್ವೀಲ್ ಕರ್ ಮತ್ತು ಡಿ. ವೈ. ಚಂದ್ರಚೂಡ್ ಅವರಿದ್ದ ನ್ಯಾಯಪೀಠ ಸಂವಿಧಾನದ 142 ನೇ ಪರಿಚ್ಛೇದದಡಿಯಲ್ಲಿ ತನ್ನ ಅಸಾಧಾರಣ ಶಕ್ತಿಯನ್ನು ವ್ಯಕ್ತಪಡಿಸಿತು.
ಸ್ಥಳೀಯ ಸಂಸ್ಥೆ ಚುನಾವಣೆಗೆ ಸಂಬಂಧಿಸಿದ ಆರೋಪಗಳ ಹಿನ್ನೆಲೆಯಲ್ಲಿ ಫಲಿತಾಂಶವನ್ನು ಹೊರಡಿಸದಂತೆ ಪಶ್ಚಿಮ ಬಂಗಾಳ ಚುನಾವಣಾ ಆಯೋಗಕ್ಕೆ ಈ ಹಿಂದೆ ಸುಪ್ರೀಂಕೋರ್ಟ್ ನಿರ್ದೇಶನ ನೀಡಿತ್ತು. ಈ ಮಧ್ಯೆ ಕಲ್ಕತ್ತಾ ಹೈಕೋರ್ಟ್ ಆದೇಶವನ್ನು ವಜಾಗೊಳಿಸಿದ ನ್ಯಾಯಾಲಯ, ಇ- ಮೇಲ್ , ವಾಟ್ಸಪ್ ಮೂಲಕ ನಾಮಪತ್ರ ಸಲ್ಲಿಕೆ ಪ್ರಕ್ರಿಯೆಗೆ ಜನಪ್ರತಿನಿಧಿ ಕಾಯ್ದೆಯಲ್ಲಿ ಅವಕಾಶವಿಲ್ಲ ಎಂದು ಹೇಳಿತ್ತು.
ಪಶ್ಚಿಮ ಬಂಗಾಳದಲ್ಲಿನ 58, 692 ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ 20,159 ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು. ಇದಕ್ಕೆ ಸಿಪಿಐ (ಎಂ) ಹಾಗೂ ಬಿಜೆಪಿಯಿಂದ ತೀವ್ರ ವಿರೋಧ ವ್ಯಕ್ತವಾಗಿತ್ತು.