ಭೂಪಾಲ್: ಮಧ್ಯಪ್ರದೇಶದಲ್ಲಿ 109 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ರಚನಾತ್ಮಕ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವ ವಿಶ್ವಾಸದಲ್ಲಿದೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ 10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹ್ಹಾಣ್ ಎಚ್ಚರಿಕೆ ನೀಡಿದ್ದಾರೆ.
ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಸುಮ್ಮನೆ ಕುಳಿತುಕೊಳ್ಳಲು 1 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿಲ್ಲ. 109 ಶಾಸಕರನ್ನು ಹೊಂದಿದ್ದು, ರಚನಾತ್ಮಕ ಹಾಗೂ ಜವಾಬ್ದಾರಿಯುತ ಪ್ರತಿಪಕ್ಷವಾಗಿ ಕಾರ್ಯನಿರ್ವಹಿಸುವುದಾಗಿ ಹೇಳಿದರು.
10 ದಿನಗಳೊಳಗೆ ರೈತರ ಸಾಲ ಮನ್ನಾ ಮಾಡುವುದಾಗಿ ಕಾಂಗ್ರೆಸ್ ಭರವಸೆ ನೀಡಿದೆ. ಈ ಅವಧಿಯಲ್ಲಿ ಸಾಲ ಮನ್ನಾ ಮಾಡದಿದ್ದರೆ ಮುಖ್ಯಮಂತ್ರಿಯನ್ನು ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಈ ಬದ್ಧತೆಯನ್ನು ಅವರು ಪೂರ್ಣಗೊಳಿಸಿದ್ದಾರೆ ಎಂಬ ಸಂಪೂರ್ಣ ನಂಬಿಕೆ ಹೊಂದಿದ್ದೇನೆ ಎಂದರು.
ತಮ್ಮ ಅಧಿಕಾರವಧಿಯಲ್ಲಿ ಹಲವು ಯೋಜನೆಗಳನ್ನು ಕೈಗೊಳ್ಳುವ ಮೂಲಕ ಮಧ್ಯಪ್ರದೇಶದ ಅಭಿವೃದ್ದಿಗಾಗಿ ಶ್ರಮಿಸಲಾಗಿದೆ. ಅಧಿಕಾರಕ್ಕೆ ಬರುವ ಹೊಸ ಸರ್ಕಾರ ಕೂಡಾ ಸಾರ್ವಜನಿಕ ಕಲ್ಯಾಣ ಕಾರ್ಯಗಳನ್ನು ಮುಂದುವರೆಸಿಕೊಂಡು ಹೋಗಬೇಕು. 13 ವರ್ಷಗಳ ಕಾಲ ಆಡಳಿತ ನಡೆಸಲು ಅವಕಾಶ ಮಾಡಿಕೊಟ್ಟ ರಾಜ್ಯದ ಜನತೆಗೆ ಅಭಿನಂದನೆ ಸಲ್ಲಿಸುವುದಾಗಿ ಶಿವರಾಜ್ ಸಿಂಗ್ ಚೌಹ್ಹಾಣ್ ಹೇಳಿದರು.