3 ಕಾಂಗ್ರೆಸ್ ಮುಖ್ಯಮಂತ್ರಿಗಳ ಪ್ರಮಾಣವಚನ ಇಂದು: ಮಹಾಮೈತ್ರಿಗೆ ಮತ್ತೊಂದು ವೇದಿಕೆ ಸಜ್ಜು
ನವದೆಹಲಿ: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗಳ ಪೈಕಿ ಕಾಂಗ್ರೆಸ್ 3 ರಾಜ್ಯಗಳಲ್ಲಿ ಐತಿಹಾಸಿಕ ಗೆಲುವು ದಾಖಲಿಸಿದ್ದು, ಇದರಂತೆ 3 ರಾಜ್ಯಗಳಲ್ಲಿ ಸೋಮವಾರ ನೂತನ ಮುಖ್ಯಮಂತ್ರಿಗಳ ಪ್ರಮಾಣವಚನ ಕಾರ್ಯಕ್ರಮ ನಡೆಯಲಿದೆ.
ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ಗಢದ ರಾಜಧಾನಿಗಳಲ್ಲಿ ಕಾರ್ಯಕ್ರಮಗಳು ನಡೆಯಲಿದ್ದು, ಇದರಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸೇರಿದಂತೆ ಪಕ್ಷದ ಹಲವು ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.
ಈ ಪೈಕಿ ಮಧ್ಯಪ್ರದೇಶದಲ್ಲಿ ನಡೆಯುವ ಕಾರ್ಯಕ್ರಮಕ್ಕೆ ಬಿಜೆಪಿ ವಿರೋಧಿ ಪಕ್ಷಗಳ ನಾಯಕರಿಗೂ ಆಹ್ವಾನ ನೀಡಲಾಗಿದೆ. ಹೀಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಮೈತ್ರಿಕೂಡ ಕಟ್ಟುವ ಸಿದ್ಧತೆಯಲ್ಲಿರುವ ವಿರೋಧ ಪಕ್ಷಗಳ ಶಕ್ತಿಪ್ರದರ್ಶನಕ್ಕೆ ಭೋಪಾಕ್ ಕಾರ್ಯಕ್ರಮ ಮತ್ತೊಂದು ವೇದಿಕೆಯಾಗಲಿದೆ ಎಂದು ಹೇಳಲಾಗುತ್ತಿದೆ.
ಭೋಪಾಲ್'ನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಕರ್ನಾಟಕದಿಂದ ಹೆಚ್.ಡಿ.ದೇವೇಗೌಡ, ಸಿದ್ದರಾಮಯ್ಯ, ಹಾಲಿ ಸಿಎಂ ಕುಮಾರಸ್ವಾಮಿ, ಮಲ್ಲಿಕಾರ್ಜುನ ಖರ್ಗೆ, ಮಾಡಿ ಪ್ರಧಾನಿ ಮನಮೋಹನ್ ಸಿಂಗ್ ಸೇರಿ ಇತರೆ ಕೆಲ ನಾಯಕರು ಭಾಗಿಯಾಲಿದ್ದಾರೆ. ಇದಲ್ಲದೇ ಆಂಧ್ರಪ್ರದೇಶ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು, ಪುದುಚೇರಿ ಮುಖ್ಯಮಂತ್ರಿ ನಾರಾಯಣಸ್ವಾಮಿ, ಡಿಎಂಕೆ ನಾಯಕ ಸ್ಟಾಲಿನ್, ಸಿಪಿಎಂ, ಸಿಪಿಐ, ನ್ಯಾಷನಲ್ ಕಾನ್ಫರೆನ್ಸ್, ಎನ್'ಸಿಪಿ ನಾಯಕರು ಕೂಡ ಭಾಗಿಯಾಗಲಿದ್ದಾರೆಂದು ವರದಿಗಳು ತಿಳಿಸಿವೆ.
ಹೀಗಾಗಿ ಇಂದು ಕಾರ್ಯಕ್ರಮ ಕಾಂಗ್ರೆಸ್ ಪಾಲಿಗೆ ರಾಜ್ಯದಲ್ಲಿ 15 ವರ್ಷಗಳ ಅಧಿಕಾರಕ್ಕೆ ಬಂದ ಸಂಭ್ರಮವಾಗಲಿದೆ. ವಿರೋಧಪಕ್ಷಗಳ ಪಾಲಿಗೆ ಹೊಸ ಮೈತ್ರಿಕೂಟ ರಚನೆಯಲ್ಲಿ ಮತ್ತೊಂದು ಹೆಜ್ಜೆಯಾಗಲಿದೆ.
ಈ ಹಿಂದೆ ಕರ್ನಾಟಕ ಮುಖ್ಯಮಂತ್ರಿ ಕುಮಾರಸ್ವಾಮಿಯವರ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿಯೂ ಇದೇ ರೀತಿಯಲ್ಲಿ ವಿರೋಧ ಪಕ್ಷಗಳ ನಾಯಕರು ದೊಡ್ಡ ಮಟ್ಟದಲ್ಲಿ ವೇದಿಕೆ ಮೇಲೆ ಕಾಣಿಸಿಕೊಂಡಿದ್ದರು.
ಇಂದು ಬೆಳಿಗ್ಗೆ 10 ಗಂಟೆಗೆ ರಾಜಸ್ಥಾನ ಮುಖ್ಯಮಂತ್ರಿಯಾಗಿ ಅಶೋಕ್ ಗೆಹ್ಲೋಟ್, ಉಪ ಮುಖ್ಯಮಂತ್ರಿಯಾಗಿ ಸಚಿನ್ ಪೈಲಟ್ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ರಾಜಧಾನಿ ಜೈಪುರದ ಆಲ್ಬರ್ಟ್ ಹಾಲ್ ನಲ್ಲಿ ಕಾರ್ಯಕ್ರಮ ನಡೆಸಲಿದೆ. ಹೊರಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸಾವಿರಾರು ಜನರಿಗೆ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಇನ್ನು ಮಧ್ಯಾಹ್ನ 1.30ಕ್ಕೆ ಭೋಪಾಲ್ ನಲ್ಲಿ ಮಧ್ಯಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಕಮಲ್ ನಾಥ್ ಅವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಜಂಬೂರಿ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಕಾಂಗ್ರೆಸ್ ಪಾಲಿಗೆ ಇಂದು ಬಹುದೊಡ್ಡ ಕಾರ್ಯಕ್ರಮವಾಗಲಿದೆ.
ಮತ್ತೊಂದೆಡೆ ಛತ್ತೀಸ್ಗಢದ ರಾಜಧಾನಿಯಲ್ಲಿ ಸಂಜೆ 5 ಗಂಟೆಗೆ ನೂತನ ಮುಖ್ಯಮಂತ್ರಿಯಾಗಿ ಭೂಪೇಶ್ ಬಘೇಲ್ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದರಲ್ಲೂ ಪಕ್ಷದ ಹಲವು ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos