ಭೋಪಾಲ್: ಮಧ್ಯ ಪ್ರದೇಶ ನೂತನ ಮುಖ್ಯಮಂತ್ರಿಯಾಗಿ ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು.
ಇಂದು ನಡೆದ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಅವರು ಕಮಲ್ ನಾಥ್ ಅವರಿಗೆ ಪ್ರತಿಜ್ಞಾವಿಧಿ ಬೋಧಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿಗಳಾದ ಡಾ.ಮನಮೋಹನ್ ಸಿಂಗ್, ಎಚ್ ಡಿ ದೇವೇಗೌಡ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ನೆಹರೂ ಕುಟುಂಬಕ್ಕೆ ಆಪ್ತರಾಗಿದ್ದ 72 ವರ್ಷದ ಕಮಲ್ ನಾಥ್ ಅವರು ಇದೇ ಮೊದಲ ಬಾರಿಗೆ ಮಧ್ಯ ಪ್ರದೇಶದ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿದ್ದಾರೆ. ಕಮಲ್ ನಾಥ್ ಅವರು ಉತ್ತರ ಪ್ರದೇಶ ಕಾನ್ಪುರದಲ್ಲಿ ಜನಿಸಿದ್ದರೂ, ಮಧ್ಯ ಪ್ರದೇಶದ ಛಿಂದವಾಡ ಕೋಲಸಭಾ ಕ್ಷೇತ್ರದಿಂದ ಒಂಬತ್ತು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.
ಕಳೆದ ಮೇ ತಿಂಗಳಲ್ಲಿ ಮಧ್ಯ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾಗಿ, ವಿಧಾನಸಭೆ ಚುನಾವಣೆಯ ನೇತೃತ್ವ ವಹಿಸಿಕೊಂಡಿದ್ದ ಕಮಲ್ ನಾಥ್ ಅವರು, 15 ವರ್ಷಗಳ ಬಿಜೆಪಿ ಆಡಳಿತಕ್ಕೆ ಅಂತ್ಯಹಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics