ದೇಶ

ಪಶ್ಚಿಮ ಬಂಗಾಳದಲ್ಲಿ ರಥ ಯಾತ್ರೆಗೆ ಅನುಮತಿ ಕೋರಿ ಸುಪ್ರೀಂ ಮೊರೆ ಹೋಗಲು ಬಿಜೆಪಿ ನಿರ್ಧಾರ

Lingaraj Badiger
ನವದೆಹಲಿ: ಪಶ್ಚಿಮ ಬಂಗಾಳದಲ್ಲಿ 'ಪ್ರಜಾಪ್ರಭುತ್ವ ಉಳಿಸಿ' ರಥ ಯಾತ್ರೆಗೆ ತಡೆ ನೀಡಿದ್ದ ಕೋಲ್ಕತಾ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಬಿಜೆಪಿ ನಿರ್ಧರಿಸಿದೆ.
ಬಿಜೆಪಿ ಪಶ್ಚಿಮ ಬಂಗಾಳದ ವಿವಿಧ ಪ್ರದೇಶಗಳಲ್ಲಿ ಮೂರು ರಥ ಯಾತ್ರೆ ನಡೆಸಲು ಉದ್ದೇಶಿಸಿದ್ದು, ಇದಕ್ಕೆ ಪಶ್ಚಿಮ ಬಂಗಾಳ ಸರ್ಕಾರ ಅನುಮತಿ ನಿರಾಕರಿಸಿತ್ತು. 
ಪಶ್ಚಿಮ ಬಂಗಾಳ ಸರ್ಕಾರದ ನಿರ್ಧಾರ ಪ್ರಶ್ನಿಸಿ ಬಿಜೆಪಿ ಹೈಕೋರ್ಟ್ ಮೊರೆ ಹೋಗಿತ್ತು. ಬಿಜೆಪಿ ಅರ್ಜಿಯ ವಿಚಾರಣೆ ನಡೆಸಿದ ಕೋಲ್ಕತಾ ಹೈಕೋರ್ಟ್ ಏಕ ಸದಸ್ಯ ಪೀಠ ಮೂರು ರಥ ಯಾತ್ರೆಗಳಿಗೆ ಅನುಮತಿ ನೀಡಿತ್ತು. ಆದರೆ ಮಮತಾ ಬ್ಯಾನರ್ಜಿ ಸರ್ಕಾರ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.
ಪಶ್ಚಿಮ ಬಂಗಾಳ ಸರ್ಕಾರದ ಮೇಲ್ಮನವಿ ಅರ್ಜಿಯ ವಿಚಾರಣೆ ನಡೆಸಿದ ಕೋಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಾಧೀಶರನ್ನೊಳಗೊಂಡ ವಿಭಾಗೀಯ ಪೀಠ, ಬಿಜೆಪಿ ರಥಯಾತ್ರೆಗೆ ಅವಕಾಶ ಕಲ್ಪಿಸಿದ ಏಕ ಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಿತ್ತು. ಅಲ್ಲದೆ ಭದ್ರತೆ ಮತ್ತು ಗುಪ್ತಚರ ಮಾಹಿತಿ ಪರಿಗಣಿಸಿ ಮರು ವಿಚಾರಣೆ ನಡೆಸುವಂತೆ ಏಕ ಸದಸ್ಯ ಪೀಠಕ್ಕೆ ಸೂಚಿಸಿದೆ.
ರಥ ಯಾತ್ರೆಯಿಂದ ಕೋಮುಗಲಭೆ ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಪಶ್ಚಿಮ ಬಂಗಾಳ ಸರ್ಕಾರ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರ ರಥ ಯಾತ್ರೆಗೆ ಅನುಮತಿ ನೀಡಲು ನಿರಾಕರಿಸಿತ್ತು.
SCROLL FOR NEXT