ದೇಶ

ಆಂತರಿಕ ಭಿನ್ನಾಭಿಪ್ರಾಯ ಶಮನ ಮಾಡುವ ಸಾಮರ್ಥ್ಯ ನ್ಯಾಯಾಂಗಕ್ಕೆ ಇದೆ: ಕೇಂದ್ರ

Lingaraj Badiger
ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಇತರೆ ನಾಲ್ವರು ಹಿರಿಯ ನ್ಯಾಯಮೂರ್ತಿಗಳ ನಡುವಿನ ಭಿನ್ನಾಭಿಪ್ರಾಯ ಪ್ರಕರಣದಿಂದ ತಾನು ದೂರವಿರುವುದಾಗಿ ಶುಕ್ರವಾರ ಕೇಂದ್ರ ಸರ್ಕಾರ ಸಂಸತ್ತಿಗೆ ಸ್ಪಷ್ಟಪಡಿಸಿದ್ದು, ಆಂತರಿಕ ಭಿನ್ನಾಭಿಪ್ರಾಯ ಶಮನ ಮಾಡುವ ಸಾಮರ್ಥ್ಯ ನ್ಯಾಯಾಂಗಕ್ಕೆ ಇದೆ ಎಂದು ಹೇಳಿದೆ.
ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಬಿಕ್ಕಟ್ಟಿಗೆ ಸಂಬಂಧಿಸಿದ ಮೂರು ಪ್ರತ್ಯೇಕ ಪ್ರಶ್ನೆಗಳಿಗೆ ರಾಜ್ಯಸಭೆಯಲ್ಲಿ ಉತ್ತರಿಸಿದ ಕಾನೂನು ಖಾತೆ ರಾಜ್ಯ ಸಚಿವ ಪಿಪಿ ಚೌಧರಿ ಅವರು, ಭಿನ್ನಾಭಿಪ್ರಾಯಕ್ಕೆ ಸಂಬಂಧಿಸಿದಂತೆ ಸರ್ಕಾರಕ್ಕೆ ಯಾವುದೇ ಮಾಹಿತಿ ಬಂದಿಲ್ಲ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಬಿಕ್ಕಟ್ಟಿನ ಬಗ್ಗೆ ಕೇಂದ್ರ ಯಾವುದೇ ನಿರ್ಧಾರ ತೆಗೆದುಕೊಂಡಿದೆ ಎಂಬ ಪ್ರಶ್ನೆಗೆ ಲಿಖಿತ ಉತ್ತರ ನೀಡಿದ ಚೌಧರಿ ಅವರು, ಭಾರತದ ಸಂವಿಧಾನದಲ್ಲಿ ನ್ಯಾಯಾಂಗಕ್ಕೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ತನ್ನ ಆಂತರಿಕ ಭಿನ್ನಾಭಿಪ್ರಾಯಗಳನ್ನು ಸರಿಪಡಿಸಿಕೊಳ್ಳುವ ಸಾಮರ್ಥ್ಯ ಅದಕ್ಕೆ ಇದೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಹಿರಿಯ ನ್ಯಾಯಮೂರ್ತಿಗಳಾದ ಜೆ. ಚಲಮೇಶ್ವರ್‌, ರಂಜನ್‌ ಗೊಗೋಯ್‌, ಮದನ್‌ ಬಿ.ಲೋಕೂರ್‌ ಮತ್ತು ಕುರಿಯನ್‌ ಜೋಸೆಫ್‌ ಅವರು, ಸುಪ್ರೀಂ ಕೋರ್ಟ್‌ನೊಳಗೆ ಹಲವು ಸಮಸ್ಯೆಗಳಿದ್ದು ಇದು ದೇಶದ ಅತ್ಯುನ್ನತ ನ್ಯಾಯ ಸಂಸ್ಥೆಯನ್ನು ಬಾಧಿಸುವುದರ ಜತೆಗೆ ದೇಶದ ಪ್ರಜಾತಂತ್ರವನ್ನೇ ಅಪಾಯಕ್ಕೆ ಒಡ್ಡಲಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ಎಚ್ಚರಿಕೆ ನೀಡಿದ್ದರು.
SCROLL FOR NEXT