ನವದೆಹಲಿ: ಪ್ರತಿಪಕ್ಷಗಳ ಸಂಸದರು ಶುಕ್ರವಾರ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರನ್ನು ಭೇಟಿ ಮಾಡಿ ಸಿಬಿಐ ವಿಶೇಷ ನ್ಯಾಯಾಧೀಶ ಬಿ.ಹೆಚ್. ಲೋಯಾ ಅವರ ಅನುಮಾನಾಸ್ಪಾದ ಸಾವು ಪ್ರಕರಣವನ್ನು ಕೋರ್ಟ್ ಮೇಲುಸ್ತುವಾರಿಯಲ್ಲಿ ಎಸ್ ಐಟಿ ತನಿಖೆ ನಡೆಸಬೇಕು ಎಂದು ಮನವಿ ಮಾಡಿದ್ದಾರೆ.
ಕಾಂಗ್ರೆಸ್, ತೃಣಮೂಲ ಕಾಂಗ್ರೆಸ್ ಮತ್ತು ಡಿಎಂಕೆ ಸೇರಿದಂತೆ ಹಲವು ಪ್ರತಿಪಕ್ಷಗಳ ಸಂಸದರು ಇಂದು ರಾಷ್ಟ್ರಪತಿಗಳನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ. ಕಾನೂನಿನ ಘನತೆಯನ್ನು ಎತ್ತಿಹಿಡಿಯಲು ರಾಷ್ಟ್ರಪತಿಗಳು ನ್ಯಾಮೂರ್ತಿ ಲೋಯಾ ನಿಗೂಢ ಸಾವಿನ ಪ್ರಕರಣದಲ್ಲಿ ಮಧ್ಯ ಪ್ರವೇಶಿಸಬೇಕು ಮತ್ತು ಪ್ರಕರಣದ ತನಿಖೆಗೆ ಸುಪ್ರೀಂ ಕೋರ್ಟ್ ಮೇಲುಸ್ತುವಾರಿಯಲ್ಲಿ ಸ್ವತಂತ್ರ ಅಧಿಕಾರಿಗಳ ವಿಶೇಷ ತನಿಖಾ ತಂಡ ರಚಿಸಬೇಕು ಎಂದು ಮನವಿ ಮಾಡಲಾಗಿದೆ.
ರಾಷ್ಟ್ರಪತಿಗಳಿಗೆ ಸಲ್ಲಿಸಿದ ಈ ಮನವಿಗೆ 15 ವಿವಿಧ ರಾಜಕೀಯ ಪಕ್ಷಗಳ 114 ಸಂಸದರು ಸಹಿ ಮಾಡಿದ್ದಾರೆ.
ನಮಗೆ ಸಿಬಿಐ ಅಥವಾ ಎನ್ ಐಎ ಮೇಲೆ ವಿಶ್ವಾಸವಿಲ್ಲ ಎಂದಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದ ಪ್ರತಿಪಕ್ಷಗಳ ಸಂಸದ ನಿಯೋಗ, ನ್ಯಾಯಮೂರ್ತಿ ಲೋಯಾ ಸಾವಿನ ಪ್ರಕರಣವನ್ನು ಎಸ್ ಐಟಿ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದೆ.
ಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಧೀಶ ಲೋಯಾ ಅವರು ಡಿಸೆಂಬರ್ 1, 2014ರಂದು ನಾಗಪುರದಲ್ಲಿ ಅನುಮಾನಸ್ಪದವಾಗಿ ಮೃತಪಟ್ಟಿದ್ದರು.
ಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜಸ್ತಾನ ಗೃಹ ಸಚಿವ ಗುಲಾಬ್ ಚಂದ್ ಕಠಾರಿಯ, ಸೇರಿದಂತೆ ಹಲವು ಮಂದಿ ಪೊಲೀಸ್ ಅಧಿಕಾರಿಗಳನ್ನು ಈಗಾಗಲೇ ಬಿಡುಗಡೆಗೊಳಿಸಿರುವುದನ್ನು ಇಲ್ಲಿ ಸ್ಮರಿಸಬಹುದು.