ಉತ್ತರಪ್ರದೇಶ: ಟ್ರ್ಯಾಕ್ಟರ್-ಟ್ರಕ್ ಮುಖಾಮುಖಿ ಡಿಕ್ಕಿ, 5 ಸಾವು, 22 ಜನರಿಗೆ ಗಾಯ
ಉತ್ತರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, 22ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ...
ಮಥುರಾ: ಉತ್ತರಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ಟ್ರ್ಯಾಕ್ಟರ್ ಹಾಗೂ ಟ್ರಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿ, 22ಕ್ಕೂ ಹೆಚ್ಚು ಜನರಿಗೆ ಗಾಯವಾಗಿರುವ ಘಟನೆ ಮಂಗಳವಾರ ನಡೆದಿದೆ.
ಮನಗಾಡಿ ಗ್ರಾಮದಲ್ಲಿ ಕಾರ್ಯಕ್ರಮವೊಂದಕ್ಕೆ ತೆರಳಿದ್ದ ಜನರು ಟ್ರ್ಯಾಕ್ಟರ್ ನಲ್ಲಿ ಹಥ್ರಾಸ್ ಗೆ ತೆರಳುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಮೇಲಿದ್ದ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದಾರೆ. ಬಳಿಕ ಎದುರಿಗೆ ಬರುತ್ತಿದ್ದ ಟ್ರಕ್'ಗೆ ಟ್ರ್ಯಾಕ್ಟರ್ ರಭಸದಿಂದ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಘಟನೆಯಲ್ಲಿ ನಾಲ್ವರು ಮಹಿಳೆಯರು ಸೇರಿ ಒಟ್ಟು ಐವರು ಸಾವನ್ನಪ್ಪಿದ್ದು, 22 ಮಂದಿ ಗಾಯಗೊಂಡಿದ್ದಾರೆಂದು ಪೊಲೀಸ್ ಅಧಇಕಾರಿ ಆದಿತ್ಯ ಕುಮಾರ್ ಶುಕ್ಲಾ ಅವರು ಹೇಳಿದ್ದಾರೆ.
ಗಾಯಗೊಂಡಿರುವ 22 ಮಂದಿಯ ಪೈಕಿ ನಾಲ್ವರ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಮುಂದುವರೆಸಲಾಗುತ್ತಿದೆ. ಉಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದರಿಂದಾಗಿ ಚಿಕಿತ್ಸೆ ನೀಡಿದ ಬಳಿಕ ಮನೆಗಳಿಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಅಪಘಾತ ಸಂಭವಿಸಿದ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಚಾಲಕನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.