ನವದೆಹಲಿ: ದೇಶದ ಆರ್ಥಿಕತೆಗೆ ಸಂಬಂಧಿಸಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದು ಸುದ್ದಿಯಾಗಿದ್ದ ಬಿಜೆಪಿ ನಾಯಕ ಯಶವಂತ್ ಸಿನ್ಹಾ ಅವರು ಈಗ ಮತ್ತೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದು, ಕೇಂದ್ರ ಸಚಿವರು ಸಹ ಸುಪ್ರೀಂ ಕೋರ್ಟ್ ನ್ಯಾಯಾಧೀಶರಂತೆ ಧೈರ್ಯವಾಗಿ ಪ್ರಜಾಪ್ರಭುತ್ವದ ಬಗ್ಗೆ ಮಾತನಾಡಬೇಕು ಎಂದು ಶನಿವಾರ ಹೇಳಿದ್ದಾರೆ.
ನಿನ್ನೆ ಸುಪ್ರೀಂ ಕೋರ್ಟ್ ನ ನಾಲ್ವರು ನ್ಯಾಯಾಧೀಶರು ಇದೇ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸುವ ಮೂಲಕ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರ ವಿರುದ್ಧ ತಮ್ಮ ಅಸಮಾಧಾನ ಹೊರ ಹಾಕಿದ್ದರು. ಈ ಬಗ್ಗೆ ಇಂದು ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಯಶವಂತ್ ಸಿನ್ಹಾ ಅವರು, ಸಂಸತ್ತು ರಾಜಿ ಮಾಡಿಕೊಂಡರೆ, ಸುಪ್ರೀಂ ಕೋರ್ಟ್ ಸೂಕ್ತ ರೀತಿಯಲ್ಲಿ ಕಾರ್ಯನಿರ್ವಹಿಸುವುದಿಲ್ಲ ಮತ್ತು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದಿದ್ದಾರೆ.
ಸುಪ್ರೀಂ ಕೋರ್ಟ್ ನಾಲ್ವರು ಹಿರಿಯ ನ್ಯಾಯಾಧೀಶರು ಪ್ರಜಾಪ್ರಭುತ್ವ ಅಪಾಯದಲ್ಲಿದೆ ಎಂದು ಹೇಳುವುದಾದರೆ, ನಾವು ಅದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ ಎಂದು ಯಶವಂತ್ ಸಿನ್ಹಾ ಹೇಳಿದ್ದಾರೆ.
ಪ್ರಜಾಪ್ರಭುತ್ವದಲ್ಲಿರುವ ಪ್ರತಿ ನಾಗರಿಕನೂ ಮಾತನಾಡಬೇಕು. ಹೀಗಾಗಿ ನಾನು ನನ್ನ ಪಕ್ಷದ ಸಹೋದ್ಯೋಗಿಗಳಿಗೆ ಮತ್ತು ಕೇಂದ್ರದ ಹಿರಿಯ ಸಚಿವರಿಗೆ ಬಹಿರಂಗವಾಗಿ ಮಾತನಾಡಿ ಅಂತ ಕೇಳಿಕೊಳ್ಳುತ್ತೇನೆ. ಭಯದಿಂದ ಹೊರಬಂದು ಬಹಿರಂಗವಾಗಿ ಮಾತನಾಡಿ ಅಂತ ನಾನು ಸಚಿವರಿಗೆ ಮನವಿ ಮಾಡುತ್ತೇನೆ ಎಂದಿದ್ದಾರೆ.