ನವದೆಹಲಿ: ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಇಬ್ಬರು ನಾಗರಿಕರ ಹತ್ಯೆಗೆ ಸಂಬಂಧಿಸಿದಂತೆ ಸೇನಾ ಸಿಬ್ಬಂದಿಗಳ ವಿರುದ್ಧ ಎಫ್ಐಆರ್ ದಾಖಲಿಸಿರುವ ಬಗ್ಗೆ ಮಾತನಾಡಿರುವ ಬಿಜೆಪಿ ಸಂಸದ ಸುಬ್ರಹ್ಮಣಿಯನ್ ಸ್ವಾಮಿ, ಎಫ್ಐಆರ್ ನ್ನು ಕೂಡಲೇ ವಾಪಸ್ ಪಡೆಯುವಂತೆ ಜಮ್ಮು-ಕಾಶ್ಮೀರದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರನ್ನು ಒತ್ತಾಯಿಸಿದ್ದಾರೆ.
ಸೇನಾ ಸಿಬ್ಬಂದಿ ವಿರುದ್ಧ ಎಫ್ಐಆರ್ ವಾಪಸ್ ಪಡೆಯದೇ ಇದ್ದಲ್ಲಿ ಜಮ್ಮು-ಕಾಶ್ಮೀರದ ಸರ್ಕಾರವನ್ನು ಕಿತ್ತೊಗೆಯಬೇಕು ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ. ಜಮ್ಮು-ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಕಲ್ಲು ತೂರಾಟಗಾರರ ಗುಂಪಿನ ಮೇಲೆ ಸೇನಾ ಸಿಬ್ಬಂದಿ ನಡೆಸಿದ್ದ ಗುಂಡಿನ ದಾಳಿಗೆ ಇಬ್ಬರು ಯುವಕರು ಬಲಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಸೇನಾ ಸಿಬ್ಬಂದಿ ವಿರುದ್ಧ ಎಫ್ಐಆರ್ ದಾಖಲಿಸಿ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಅಸಮಾಧಾನಗೊಂಡಿರುವ ಸುಬ್ರಹ್ಮಣಿಯನ್ ಸ್ವಾಮಿ, ಜಮ್ಮು-ಕಾಶ್ಮೀರದಲ್ಲಿ ನಾವು ಸರ್ಕಾರವನ್ನಾದರೂ ಯಾಕೆ ನಡೆಸುತ್ತಿದ್ದೇವೆ ಇನ್ನೂ ಅರ್ಥವಾಗಿಲ್ಲ ಎಂದು ಗುಡುಗಿದ್ದು, ಮೊದಲು ಎಫ್ಐಆರ್ ವಾಪಸ್ ಪಡೆಯುವಂತೆ ಸೂಚನೆ ನೀಡಿ, ಇಲ್ಲವಾದಲ್ಲಿ ಸರ್ಕಾರ ಉರುಳುತ್ತದೆ ಎಂಬ ಎಚ್ಚರಿಕೆ ರವಾನೆ ಮಾಡಿ ಎಂದು ಪಕ್ಷ ಹಾಗೂ ಕೇಂದ್ರ ಸರ್ಕಾರಕ್ಕೆ ಹೇಳಿದ್ದಾರೆ.