ತೆಲಂಗಾಣ: ತೆಲಂಗಾಣ ವರಂಗಲ್ ಜಿಲ್ಲೆಯ ಪಟಾಕಿ ಕಾರ್ಖಾನೆಯೊಂದರಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ 11 ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿರುವ ಘಟನೆ ಬುಧವಾರ ನಡೆದಿದೆ.
ತೆಲಂಗಾಣದ ಕೋಟಿ ಲಿಂಗಗಳ ದೇವಾಲಯದ ಬಳಿಯಿರುವ ಪಟಾಕಿ ಕಾರ್ಖಾನೆಗೆ ಇದ್ದಕ್ಕಿದ್ದಂತೆ ಬೆಂಕಿ ಬಿದ್ದ ಪರಿಣಾಮ ಕಾರ್ಖಾನೆಯ 11 ಕಾರ್ಮಿಕರು ಸಜೀವ ದಹನವಾಗಿದ್ದಾರೆ.
ಅಗ್ನಿ ಅವಘಡ ಸಂಭವಿಸಿದ ಸಂದರ್ಭದಲ್ಲಿ ಕಾರ್ಖಾನೆಯಲ್ಲಿ 15 ಮಂದಿ ಇದ್ದರು ಎಂದು ಪೊಲೀಸರು ಹೇಳಿದ್ದಾರೆ.
ಬೆಂಕಿ ಕಾಣಿಸುವುದಕ್ಕೂ ಮುನ್ನ ಕಾರ್ಖಾನೆಯಲ್ಲಿ ದೊಡ್ಡ ಸ್ಫೋಟದ ಶಬ್ಧ ಕೇಳಿ ಬಂದಿತ್ತು ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದು, ಗಾಯಾಳುಗಳನ್ನು ವರಂಗಲ್'ನ ಎಂಜಿಎಂ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.