ನವದೆಹಲಿ: ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಸುನಂದಾ ಪುಷ್ಕರ್ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ಶಶಿ ತರೂರ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ಕುರಿತ ಆದೇಶವನ್ನು ದೆಹಲಿ ನ್ಯಾಯಾಲಯ ಕಾಯ್ದಿರಿಸಿದೆ.
ಪತ್ನಿ ಸುನಂದಾ ಸಾವು ಪ್ರಕರಣ ಕುರಿತಂತೆ ತಿರುವನಂತಪುರ ಸಂಸದ ಶಶಿ ತರೂರ್ ಅವರಿಗೆ ಈಗಾಗಲೇ ಸಮನ್ಸ್ ಜಾರಿಯಾಗಿದೆ. ಜೂನ್. 5 ರಂದು ಸಮನ್ಸ್ ಜಾರಿ ಮಾಡಿದ್ದ ನ್ಯಾಯಾಲಯ ಜು.7 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ಪ್ರಕರಣ ಸಂಬಂಧ ನಿರೀಕ್ಷಣಾ ಜಾಮೀನು ನೀಡುವಂತೆ ಶಶಿ ತರೂರ್ ಅವರು ನ್ಯಾಯಾಲಯ ಮೆಟ್ಟಿಲೇರಿದ್ದರು.
ಪ್ರಕರಣ ಸಂಬಂಧ ನ್ಯಾಯಾಲಯ ನಿರೀಕ್ಷಣಾ ಜಾಮೀನು ನೀಡಿದ್ದೇ ಆದರೆ, ದೇಶ ಬಿಟ್ಟು ಹೋಗುವ ಸಾಧ್ಯತೆಗಳಿದ್ದು, ಹೀಗಾಗಿ ಜಾಮೀನು ನೀಡದಂತೆ ನ್ಯಾಯಾಲಯಕ್ಕೆ ದೆಹಲಿ ಪೊಲೀಸರು ತಿಳಿಸಿದ್ದರು. ಈ ಹಿನ್ನಲೆಯಲ್ಲಿ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ಅರವಿಂದ ಕುಮಾರ್ ಅವರು ನಿರೀಕ್ಷಣಾ ಜಾಮೀನು ಕುರಿತ ಆದೇಶವನ್ನು ನಾಳೆಯವರೆಗೂ ಕಾಯ್ದಿರಿಸಿದ್ದಾರೆ.