ನವದೆಹಲಿ: ಇತ್ತೀಚಿಗೆ ರಾಜಸ್ಥಾನದ ಅಳ್ವಾರ್ ನಲ್ಲಿ ನಡೆದ ಸಾಮೂಹಿಕ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸುವಂತೆ ರಾಜಸ್ಥಾನ ಸರ್ಕಾರಕ್ಕೆ ಕೇಂದ್ರ ಗೃಹ ಸಚಿವಾಲಯ ಸೋಮವಾರ ಸೂಚನೆ ನೀಡಿದೆ.
ಜುಲೈ 21 ರಂದು ರಾಜಸ್ತಾನದ ಅಳ್ವಾರ್ ನಲ್ಲಿ ಗೋವು ಸಾಗಣೆ ಆರೋಪದ ಮೇರೆಗೆ ವ್ಯಕ್ತಿಯೊಬ್ಬರ ಮೇಲೆ ಸಾಮೂಹಿಕ ಹಲ್ಲೆ ನಡೆಸಲಾಗಿತ್ತು.
ಪ್ರಕರಣ ಸಂಬಂಧ ವಿರೋಧ ಪಕ್ಷಗಳಿಂದ ಹಲವು ಟೀಕೆಗಳು ವ್ಯಕ್ತವಾಗಿದ್ದವು. ಅಲ್ಲದೆ, ಲೋಕಸಭೆ ಕಲಾಪದಲ್ಲೂ ವಿರೋಧ ಪಕ್ಷಗಳು ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದವು.
ಈ ಹಿನ್ನಲೆಯಲ್ಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕೇಂದ್ರ ಸರ್ಕಾರ ಕೂಡಲೇ ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಕಿರಣ್ ರಿಜಿಜು ಅವರು, ಎಲ್ಲಾ ರಾಜ್ಯಗಳಿಗೂ ಭಾರತ ಸರ್ಕಾರ ಕಠಿಣ ಸಂದೇಶವನ್ನು ರವಾನಿಸಿದೆ. ಸಾಮೂಹಿಕ ಹಲ್ಲೆ, ಹತ್ಯೆಗಳನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ಪ್ರಕರಣಗಳ ಸಂಬಂಧ ಯಾವುದೇ ರೀತಿಯ ನಡವಳಿಕೆಗಳನ್ನು ಸಹಿಸದೆ, ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜಸ್ಥಾನ ಡಿಜಿಪಿ ಒಪಿ ಗಲ್ಹೋತ್ರಾ ಅವರು ಪ್ರಕರಣ ಸಂಬಂಧ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ತಂಡವನ್ನು ರಚನೆ ಮಾಡಿದ್ದು, ಶೀಘ್ರದಲ್ಲಿಯೇ ವರದಿ ಸಲ್ಲಿಸುವಂತೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.