ಚೆನ್ನೈ: ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿರುವ ಡಿಎಂಕೆ ಪಕ್ಷದ ಅಧಿನಾಯಕ ಎಂ ಕರುಣಾನಿಧಿ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಉಸಿರಾಟದ ತೊಂದರೆ, ಜ್ವರ ಹಾಗೂ ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಎಂ ಕರುಣಾನಿಧಿ ಅವರನ್ನು ಕಾವೇರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಳೆದ ರಾತ್ರಿ ಅವರ ಆರೋಗ್ಯದಲ್ಲಿ ವ್ಯತ್ಯಯವಾಗಿದ್ದರಿಂದ ಅವರ ಕುಟುಂಬಸ್ಥರು ತಡರಾತ್ರಿ ಆಸ್ಪತ್ರೆಗೆ ದೌಡಾಯಿಸಿದ್ದರು. ಹೀಗಾಗಿ ಕಾರ್ಯಕರ್ತರು, ಬೆಂಬಲಿಗರು ಮತ್ತು ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿತ್ತು.
ಇದೀಗ ಕರುಣಾನಿಧಿ ಅವರ ಆರೋಗ್ಯದಲ್ಲಿ ಅಲ್ಪಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಕಾವೇರಿ ಆಸ್ಪತ್ರೆ ಆಡಳಿತ ಮಂಡಳಿ ಕರುಣಾನಿಧಿ ಅವರ ಆರೋಗ್ಯದಲ್ಲಿ ಅಲ್ಪ ಚೇತರಿಕೆ ಕಂಡುಬಂದಿದೆ. ಐಸಿಯುನಲ್ಲಿ ಅವರಿಗೆ ಚಿಕಿತ್ಸೆ ಮುಂದುವರೆಸಲಾಗಿದೆ ಎಂದು ಹೇಳಿಕೆ ಬಿಡುಗಡೆ ಮಾಡಿದೆ.
ಇನ್ನು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಕರುಣಾನಿಧಿ ಸಂಬಂಧಿ ಎ ರಾಜಾ ಅವರು, ಕರುಣಾನಿಧಿ ಅವರ ಆರೋಗ್ಯದಲ್ಲಿ ಕುಸಿತ ಕಂಡುಬಂದಿತ್ತು. ಆದರೆ ಈಗ ಕೊಂಚ ಚೇತರಿಕೆ ಕಂಡುಬಂದಿದೆ ಎಂದು ಹೇಳಿದ್ದಾರೆ.