ನವದೆಹಲಿ: ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಗೆ ದಾಖಲಾಗಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು ಮೂತ್ರನಾಳದ ಸೋಂಕಿನಿಂದ ಬಳಲುತ್ತಿದ್ದು, ಅವರಿಗೆ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆಸ್ಪತ್ರೆಯ ವೈದ್ಯರು ಸೋಮವಾರ ಸಂಜೆ ತಿಳಿಸಿದ್ದಾರೆ.
ಹಲವು ದಿನಗಳಿಂದಲೂ ಅನಾರೋಗ್ಯದಿಂದ ಬಳುತ್ತಿರುವ ವಾಜಪೇಯಿಯವರನ್ನು ಇಂದು ಬೆಳಿಗ್ಗೆಯಷ್ಟೇ ಏಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು ಮಾಜಿ ಪ್ರಧಾನಿಯ ಆರೋಗ್ಯ ಸ್ಥಿರವಾಗಿದೆ ಎಂದು ಹೇಳಿಕೆ ನೀಡಿದ್ದರು.
ಇಂದು ಸಂಜೆ ವಾಜಪೇಯಿ ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಮತ್ತೊಂದು ಮಾಧ್ಯಮ ಪ್ರಕಟಣೆ ನೀಡಿರುವ ಆಸ್ಪತ್ರೆ, ಮೂತ್ರನಾಳ ಸೋಂಕು ಹಾಗೂ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿರುವ ಅಜಾತಶತ್ರುವಿಗೆ ಐಸಿಯುನಲ್ಲಿ ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದೆ.
ಅಟಲ್ ಬಿಹಾರಿ ವಾಜಪೇಯಿ ಅವರು ಏಮ್ಸ್ ಗೆ ದಾಖಲಾಗುತ್ತಿದ್ದಂತೆ ಹಲವಾರು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.
ಪ್ರಧಾನಿ ಮೋದಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಹಾಗೂ ಕೇಂದ್ರ ಸಚಿವರು ಸೇರಿದಂತೆ ಹಲವು ಗಣ್ಯರು ಆಸ್ಪತ್ರೆಗೆ ಭೇಟಿ ನೀಡಿ ಅಟಲ್ ಬಿಹಾರಿ ವಾಜಪೇಯಿ ಆರೋಗ್ಯ ವಿಚಾರಿಸಿದರು.
ಶ್ವಾಸಕೋಶಶಾಸ್ತ್ರಜ್ಞ ಮತ್ತು ಏಮ್ಸ್‌ನ ಹಾಲಿ ನಿರ್ದೇಶಕರಾಗಿರುವ ಡಾ. ರಂದೀಪ್ ಗುಲೇರಿಯಾ ಅವರ ನೇತೃತ್ವದ ತಂಡ ವಾಜಪೇಯಿ ಅವರ ಆರೋಗ್ಯವನ್ನು ಪರಿಶೀಲಿಸುತ್ತಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಕಾಂಗ್ರೆಸ್ಸೇತರ ಸರ್ಕಾರದ ಪ್ರಧಾನಿಯಾಗಿ ಪೂರ್ಣಾವಧಿ(5 ವರ್ಷ) ಪೂರೈಸಿದ ಮೊದಲ ಪ್ರಧಾನಿ ಎಂಬ ಹೆಗ್ಗಳಿಕೆ ವಾಜಪೇಯಿ ಅವರದ್ದು. ಪದ್ಮ ವಿಭೂಷಣ ಪ್ರಶಸ್ತಿ ಮುಡಿಗೇರಿಸಿಕೊಂಡಿರುವ ಅವರಿಗೆ, 2015ರಲ್ಲಿ ಭಾರತದ ಅತ್ಯುನ್ನತ ನಾಗರಿಕ ಗೌರವ, ಭಾರತ ರತ್ನ ಪ್ರಶಸ್ತಿ ನೀಡಿ ಪುರಸ್ಕರಿಸಲಾಗಿದೆ. ಅಮೇರಿಕನ್ ಸಂಸತ್ತಿನಲ್ಲಿ ಹಿಂದಿಯಲ್ಲಿ ಭಾಷಣ ಮಾಡಿದ ಮೊದಲ ವಿದೇಶಾಂಗ ವ್ಯವಹಾರಗಳ ಸಚಿವರೆಂಬ ಖ್ಯಾತಿ ಸಹ ಅವರಿಗಿದೆ.
1924ರಲ್ಲಿ ಜನಿಸಿದ್ದ ವಾಜಪೇಯಿ 1942ರಲ್ಲಿ ನಡೆದ ಕ್ವಿಟ್ ಇಂಡಿಯಾ ಚಳುವಳಿ ಸಂದರ್ಭದಲ್ಲಿ ರಾಜಕೀಯಕ್ಕೆ ಪ್ರವೇಶಿಸಿದ್ದರು.
1991, 1996, 1998, 1999 ಮತ್ತು 2004ರಲ್ಲಿ ಲಖನೌದಿಂದ ಲೋಕಸಭೆಗೆ ಆಯ್ಕೆಯಾಗಿದ್ದರು.