ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಪ್ರಧಾನಮಂತ್ರಿ ನರೇಂದ್ರ ಮೋದಿ
ನವದೆಹಲಿ; ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರು 48ನೇ ಜನ್ಮದಿನಾಚರಣೆಯನ್ನು ಮಂಗಳವಾರ ಆಚರಿಸಿಕೊಳ್ಳುತ್ತಿದ್ದು, ಈ ಹಿನ್ನಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಭ ಹಾರೈಸಿದ್ದಾರೆ.
ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಶುಭ ಹಾರೈಸಿರುವ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಕಾಂಗ್ರೆಸ್ ಅಧ್ಯಕ್ಷ ಶ್ರೀ ರಾಹುಲ್ ಗಾಂಧಿಯವರಿಗೆ ಜನ್ಮ ದಿನದ ಶುಭಾಶಯಗಳು. ರಾಹುಲ್ ಅವರಿಗೆ ಸುದೀರ್ಘ ಹಾಗೂ ಆರೋಗ್ಯಕರ ಬದುಕನ್ನು ದೇವರು ನೀಡಲಿ ಎಂದು ಪ್ರಾರ್ಥಿಸುತ್ತೇನೆಂದು ಟ್ವೀಟ್ ಮಾಡಿದ್ದಾರೆ.
ಇನ್ನು ರಾಹುಲ್ ಗಾಂಧಿಯವರ ಹುಟ್ಟಹಬ್ಬವನ್ನು ಕಾಂಗ್ರೆಸ್ ಕಾರ್ಯಕರ್ತರು ರಾಜಧಾನಿ ದೆಹಲಿಯಲ್ಲಿರುವ ಪಕ್ಷದ ಪ್ರಧಾನ ಕಚೇರಿಯಲ್ಲಿ ಅದ್ದೂರಿಯಾಗಿ ಆಚರಿಸುತ್ತಿದ್ದಾರೆ.
ಪ್ರಧಾನ ಕಚೇರಿಯ ಹೊರಾಂಗಣದಲ್ಲಿ ರಾಹುಲ್ ಗಾಂಧಿಯವರ ದೊಡ್ಡ ದೊಡ್ಡ ಪೋಸ್ಟರ್ ಗಳು ರಾರಾಜಿಸುತ್ತಿದ್ದು, ಕಾಂಗ್ರೆಸ್ ಪ್ರಧಾನ ಕಚೇರಿ ಬಳಿ ಸಂಭ್ರಮ ಕಳೆಕಟ್ಟಿದಂತಿದೆ.
ಜೂನ್.19, 1970ರಲ್ಲಿ ರಾಜೀವ್ ಗಾಂಧಿ ಮತ್ತು ಸೋನಿಯಾ ಗಾಂಧಿ ದಂಪತಿಯ ಪುತ್ರರಾಗಿ ಜನಿಸಿದ ರಾಹುಲ್ ಗಾಂಧಿಯವರು, ಕಾಂಗ್ರೆಸ್ ಪಕ್ಷದ ಸಕ್ರಿಯ ಸದಸ್ಯರಾಗಿದ್ದರು. ಇದೀಗ ಪಕ್ಷದ ಅಧ್ಯಕ್ಷ ಸ್ಥಾನವನ್ನು ಅಲಂಕರಿಸಿದ್ದಾರೆ. ಉತ್ತರಪ್ರದೇಶದ ಅಮೇಥಿ ಕ್ಷೇತ್ರದ ಸಂಸದರೂ ಆಗಿರುವ ರಾಹುಲ್ ಅವರನ್ನು ಕಾಂಗ್ರೆಸ್ ತನ್ನ ಪ್ರಧಾನಮಂತ್ರಿ ಅಭ್ಯರ್ಥಿ ಎಂದು ಬಿಂಬಿಸುತ್ತಿದೆ.