ಶ್ರೀನಗರ: ಪಿಡಿಪಿ-ಬಿಜೆಪಿ ನಡುವಿನ ಮೈತ್ರಿ ಮುರಿದು ಬಿದ್ದಿದ್ದು, ಕಾಶ್ಮೀರ ವಿಧಾನಸಭೆಯನ್ನು ಕೂಡಲೇ ವಿಸರ್ಜಿಸಿ ಚುನಾವಣೆ ನಡೆಸಬೇಕು ಎಂದು ನ್ಯಾಷನಲ್ ಕಾಂಗ್ರೆಸ್ ಮುಖ್ಯಸ್ಥ ಹಾಗೂ ಮಾಜಿ ಸಿಎಂ ಒಮರ್ ಅಬ್ದುಲ್ಲಾ ಹೇಳಿದ್ದಾರೆ.
ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರಿದ ಬೆನ್ನಲ್ಲೇ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಒಮರ್ ಅಬ್ದುಲ್ಲಾ, ತಾವು ಯಾವುದೇ ಪಕ್ಷಕ್ಕೂ ಬೆಂಬಲ ನೀಡುವುದಿಲ್ಲ. ಕಾಶ್ಮೀರದಲ್ಲಿ ರಾಷ್ಟ್ರಪತಿ ಆಡಳಿತ ಹೇರುವ ಮೂಲಕ ಕೇಂದ್ರ ಸರ್ಕಾರ ಶಾಸಕರ ಕುದುರೆ ವ್ಯಾಪಾರಕ್ಕೆ ಅನುವು ಮಾಡಿಕೊಟ್ಟಂತಾಗುತ್ತದೆ. ಹೀಗಾಗಿ ಕೂಡಲೇ ಕಾಶ್ಮೀರ ವಿಧಾನಸಭೆಯನ್ನು ವಿಸರ್ಜನೆ ಮಾಡಿ, ಹೊಸದಾಗಿ ಚುನಾವಣೆ ನಡೆಸುವಂತೆ ಮನವಿ ಮಾಡಿದ್ದಾರೆ.
ಈ ಬಗ್ಗೆ ಟ್ವಿಟರ್ ನಲ್ಲೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಒಮರ್ ಅಬ್ದುಲ್ಲಾ, ಮಾಜಿ ಡಿಸಿಎಂ ಹಾಗೂ ಬಿಜೆಪಿ ಮುಖಂಡರು ಶಾಸಕರ ಕುದುರೆ ವ್ಯಾಪರಾದ ಕುರಿತು ಮಾಹಿತಿ ನೀಡಿದ್ದಾರೆ. ಹೀಗಾಗಿ ಅವರನ್ನು ನಂಬಲು ಸಾಧ್ಯವಿಲ್ಲ. ಶಾಸಕರ ಕುದುರೆ ವ್ಯಾಪಾರಕ್ಕೂ ಮೊದಲೇ ವಿಧಾನಸಭೆಯನ್ನು ವಿಸರ್ಜಿಸಿ ಹೊಸದಾಗಿ ಚುನಾವಣೆ ನಡೆಸಬೇಕು ಎಂದು ಆಗ್ರಹಿಸಿದ್ದಾರೆ.
ಇತ್ತೀಚೆಗಷ್ಟೇ ಕಾಶ್ಮೀರ ಉಪ ಮುಖ್ಯಮಂತ್ರಿ ಕವಿಂದರ್ ಗುಪ್ತಾ ಮಾಧ್ಯಮಗಳಿಗೆ ಹೇಳಿಕೆ ನೀಡಿ, ತಮ್ಮ ಪಕ್ಷ ಹೊಸ ಚಿಂತನೆಯಲ್ಲಿ ತೊಡಗಿದೆ ಎಂದು ಹೇಳುವ ಮೂಲಕ ಶಾಸಕರ ಕುದುರೆ ವ್ಯಾಪಾರದ ಕುರಿತು ಶಂಕೆ ಮೂಡಿಸಿದ್ದರು.