ನವದೆಹಲಿ: ಸಿಬ್ಬಂದಿ ಆಯ್ಕೆ ಆಯೋಗ (ಎಸ್ .ಎಸ್ . ಸಿ) ಫೆ.21ರಂದು ನಡೆಸಿದ್ದ ಪರೀಕ್ಷೆಗಳಲ್ಲಿ ನಡೆದಿದೆ ಎನ್ನಲಾದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಲಾಗಿದೆ.
ಈ ಬಗ್ಗೆ ಸ್ವತಃ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಹೇಳಿದ್ದು, ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಸಿಬಿಐ ತನಿಖೆಗೆ ವಹಿಸಲಾಗುವುದು ಎಂದು ಹೇಳಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ಶಿಫಾರಸ್ಸು ಮಾಡಲು ಸಿಬ್ಬಂದಿ ಆಯ್ಕೆ ಆಯೋಗ ತೀರ್ಮಾನಿಸಿತ್ತು. ಈ ಬೆನ್ನಲ್ಲೇ ಕೆಂದ್ರ ಸರ್ಕಾರ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದೆ.
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಬೇಡೀಕೆಗೆ ಕೇಂದ್ರ ಸರ್ಕಾರ ಸಮ್ಮತಿ ಸೂಚಿಸಿದ್ದು, ಸಿಬಿಐ ತನಿಖೆಗೆ ಆದೇಶಿಸಲಾಗಿದೆ. ವಿದ್ಯಾರ್ಥಿಗಳು ಈಗಲಾದರೂ ಪ್ರತಿಭಟನೆಯನ್ನು ಕೈಬಿಡಬೇಕು ಎಂದು ಸಿಂಗ್ ಹೇಳಿದ್ದಾರೆ.