ಮಧ್ಯ ಪ್ರದೇಶ ನಂತರ ಈಗ ರಾಜಸ್ಥಾದಲ್ಲೂ ಅಪ್ರಾಪ್ತೆ ಮೇಲಿನ ಅತ್ಯಾಚಾರಕ್ಕೆ ಗಲ್ಲು
12 ವರ್ಷಕ್ಕೂ ಕಡಿಮೆ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ....
ಜೈಪುರ: 12 ವರ್ಷಕ್ಕೂ ಕಡಿಮೆ ವಯಸ್ಸಿನ ಬಾಲಕಿಯರ ಮೇಲೆ ಅತ್ಯಾಚಾರ ಎಸಗುವ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಯನ್ನು ರಾಜಸ್ಥಾನ ವಿಧಾನಸಭೆ ಶುಕ್ರವಾರ ಅವಿರೋಧವಾಗಿ ಅಂಗೀಕರಿಸಿದೆ.
ಈ ಮಸೂದೆ ಅಧಿಕೃತವಾಗಿ ಜಾರಿಯಾದರೆ ಮಧ್ಯ ಪ್ರದೇಶದ ನಂತರ ಅಪ್ರಾಪ್ರೆಯರ ಮೇಲಿನ ಅತ್ಯಾಚಾರಕ್ಕೆ ಗಲ್ಲು ಶಿಕ್ಷೆ ವಿಧಿಸುತ್ತಿರುವ ಎರಡನೇ ರಾಜ್ಯವಾಗಲಿದೆ.
ರಾಜ್ಯದಲ್ಲಿ ಇತ್ತೀಚಿಗೆ ಮಹಿಳೆಯರ ಮತ್ತು ಮಕ್ಕಳ ಮೇಲಿನ ಅಪರಾಧ ಕೃತ್ಯಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜಸ್ಥಾನ ಸರ್ಕಾರ ಈ ಕಠಿಣ ಕಾನೂನು ಜಾರಿಗೆ ತರುತ್ತಿದೆ.
ಕಳೆದ ವರ್ಷ ಡಿಸೆಂಬರ್ ನಲ್ಲಿ ಮಧ್ಯ ಪ್ರದೇಶ ಸರ್ಕಾರ ಅಪ್ರಾಪ್ತ ವಯಸ್ಕರ ಮೇಲೆ ಅತ್ಯಾಚಾರ ಎಸಗುವ ಕಾಮುಕರಿಗೆ ಗಲ್ಲು ಶಿಕ್ಷೆ ವಿಧಿಸುವ ಮಸೂದೆಯನ್ನು ಅಂಗೀಕರಿಸಿದ ನಂತರ ರಾಜಸ್ಥಾನ ಸರ್ಕಾರ ಈ ಮಸೂದೆ ಸಿದ್ಧಪಡಿಸಲು ಆರಂಭಿಸಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇತ್ತೀಚೆಗೆ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿದ್ದು, ಹರಿಯಾಣದಲ್ಲೂ ಇಂತಹ ಕಠಿಣ ಕಾಯ್ದೆ ಜಾರಿಗೆ ತರುವ ಬಗ್ಗೆ ಹರಿಯಾಣ ಮುಖ್ಯಮಂತ್ರಿ ಮನೋಹರ್ ಲಾಲ್ ಖಟ್ಟರ್ ಸಹ ಸುಳಿವು ನೀಡಿದ್ದಾರೆ.